ADVERTISEMENT

ಬಲಿಷ್ಠ ಭಾರತಕ್ಕಾಗಿ ಮತದಾನ ಮಾಡಿ

ಬೈಕ್‌ರ‍್ಯಾಲಿ ಮೂಲಕ ಮತದಾನದ ಜಾಗೃತಿ ಮೂಡಿಸಿದ ಸ್ವೀಪ್ ಸಮಿತಿ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2019, 15:31 IST
Last Updated 8 ಏಪ್ರಿಲ್ 2019, 15:31 IST
ಯಾದಗಿರಿಯಲ್ಲಿ ಸೋಮವಾರ ಜಿಲ್ಲಾ ಸ್ವೀಪ್‌ ಸಮಿತಿ ಮತದಾರರಿಗೆ ಮತದಾನದ ಪ್ರತಿಜ್ಞಾವಿಧಿ ಬೋಧಿಸಿತು
ಯಾದಗಿರಿಯಲ್ಲಿ ಸೋಮವಾರ ಜಿಲ್ಲಾ ಸ್ವೀಪ್‌ ಸಮಿತಿ ಮತದಾರರಿಗೆ ಮತದಾನದ ಪ್ರತಿಜ್ಞಾವಿಧಿ ಬೋಧಿಸಿತು   

ಯಾದಗಿರಿ: ‘ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಾದ್ಯಂತ ಏ. 23ರಂದು ಮತದಾನ ನಡೆಯಲಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು’ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಕವಿತಾ ಎಸ್.ಮನ್ನಿಕೇರಿ ಮನವಿ ಮಾಡಿದರು.

ಚುನಾವಣೆ ಪ್ರಯುಕ್ತ ನಗರದಲ್ಲಿ ಸೋಮವಾರ ಸ್ವೀಪ್‌ ಸಮಿತಿಯಿಂದ ಏರ್ಪಡಿಸಿದ್ದ ಬೈಕ್‌ ರ‍್ಯಾಲಿಯಲ್ಲಿ ಅವರು ಮಾತನಾಡಿದರು.

‘ಮತ ಚಲಾಯಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಬಾರದು. ತಮ್ಮ ಅಮೂಲ್ಯ ಮತವನ್ನು ಮಾರಿಕೊಳ್ಳಬಾರದು. ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಸೂಕ್ತವಾಗಿ ತೋರದಿದ್ದಲ್ಲಿ ನೋಟಾಗೆ ಮತ ನೀಡಬಹುದು. ಚುನಾವಣೆಯಲ್ಲಿ ಒಂದೊಂದು ಮತವೂ ಕೂಡ ನಿರ್ಣಾಯಕ ಪಾತ್ರವಹಿಸುತ್ತದೆ’ ಎಂದು ಸಲಹೆ ನೀಡಿದರು.

ADVERTISEMENT

‘ಜಿಲ್ಲೆಯಲ್ಲಿ ಸ್ಥಾಪನೆ ಮಾಡಿರುವ 1,135 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಅಂದು ಯಾವುದೇ ಕೆಲಸ ಇದ್ದರೂ ಬಿಡುವು ಮಾಡಿಕೊಂಡು ತಮ್ಮ ಹೆಸರಿರುವ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿರ‍್ಯಾಂಪ್, ಕುಡಿಯುವ ನೀರು, ಶೌಚಾಲಯ ಹಾಗೂ ವಿದ್ಯುತ್ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಮಾತನಾಡಿ, ‘ಭಾರತ ಚುನಾವಣಾ ಆಯೋಗವು ಚುನಾವಣೆಯಲ್ಲಿ ಅಕ್ರಮ ತಡೆಗಟ್ಟಲು ಸಿ-ವಿಜಿಲ್ ಆ್ಯಪ್ ಪರಿಚಯಿಸಿದ್ದು, ಇದರ ಮೂಲಕ ಸಾರ್ವಜನಿಕರು ಚಿತ್ರ ಹಾಗೂ ವಿಡಿಯೊ ಸಹಿತ ದೂರು ನೀಡಬಹುದು. ಚುನಾವಣೆ ಸಂಬಂಧ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಸಹಾಯವಾಣಿ-1950 ಸಂಖ್ಯೆ ಇದೆ. ದಿನದ 24 ಗಂಟೆ ಕಾರ್ಯನಿರ್ವಹಣೆಯಲ್ಲಿರುತ್ತದೆ. ಅಲ್ಲದೇ, ಕಂಟ್ರೋಲ್ ರೂಂ ಕೂಡ ತೆರೆಯಲಾಗಿದ್ದು, ಸಾರ್ವಜನಿಕರು ದೂರವಾಣಿ ಸಂಖ್ಯೆ: 08473 253772ಕ್ಕೆ ದೂರು ಸಲ್ಲಿಸಬಹುದು ಹಾಗೂ ಮಾಹಿತಿಯನ್ನು ಪಡೆದುಕೊಳ್ಳಬಹುದು’ ಎಂದು ಹೇಳಿದರು.

‘ಮತದಾನ ಮಾಡುವ ಸಮಯದಲ್ಲಿ ಚುನಾವಣಾ ಗುರುತಿನ ಚೀಟಿ ಇಲ್ಲದಿದ್ದರೆ 11 ದಾಖಲೆಗಳ ಪೈಕಿ ಒಂದನ್ನು ಹಾಜರುಪಡಿಸಿ ಮತ ಚಲಾಯಿಸಬಹುದು. ಪಾಸ್‌ಪೋರ್ಟ್, ಚಾಲನಾ ಪರವಾನಗಿ, ಕೇಂದ್ರ, ರಾಜ್ಯ, ಪಿಎಸ್‌ಯು ನೌಕರರಾಗಿದ್ದರೆ ಸರ್ಕಾರ ನೀಡಿರುವ ಫೋಟೊ ಸಹಿತ ಗುರುತಿನ ಚೀಟಿ, ಬ್ಯಾಂಕ್, ಅಂಚೆ ಕಚೇರಿ ನೀಡಿರುವ ಭಾವಚಿತ್ರವುಳ್ಳ ಪಾಸ್‌ಬುಕ್, ಪಾನ್‌ಕಾರ್ಡ್, ರಾಷ್ಟ್ರೀಯ ಜನಸಂಖ್ಯಾ ನೋಂದಣಿ ನೀಡಿರುವ ಸ್ಮಾರ್ಟ್‌ಕಾರ್ಡ್, ನರೇಗಾ ಉದ್ಯೋಗ ಚೀಟಿ, ಆರೋಗ್ಯ ವಿಮೆಯ ಸ್ಮಾರ್ಟ್ ಕಾರ್ಡ್, ಭಾವಚಿತ್ರವುಳ್ಳ ಪಿಂಚಣಿ ದಾಖಲೆ, ಸಂಸದರು, ಶಾಸಕರು ಹಾಗೂ ಎಂಎಲ್‌ಸಿ ಗಳಿಗೆ ನೀಡಿದ ಅಧಿಕೃತ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಗಳ ಪೈಕಿ ಒಂದನ್ನು ಹಾಜರುಪಡಿಸಬಹುದು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಸಂತ ವಿ.ಕುಲಕರ್ಣಿ ಅವರು ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಜಂಟಿ ಕೃಷಿ ನಿರ್ದೇಶಕಿ ಆರ್.ದೇವಿಕಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ಕೃಷಿ ಇಲಾಖೆಯ ಉಪನಿರ್ದೇಶಕ ಅನುಸೂಯಾ ಹೂಗಾರ, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೆಶಕ ಅಜೀತ್ ಜಿ.ನಾಯಕ್, ಎಂಸಿಎಂಸಿ ನೋಡಲ್ ಅಧಿಕಾರಿ ಪೂರ್ಣಿಮಾ ಚೂರಿ, ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ, ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಆಯುಕ್ತ ಸಿ.ಎಂ.ಪಟ್ಟೇದಾರ ಇದ್ದರು.

ಜಿಲ್ಲಾಡಳಿತ ಭವನದಿಂದ ಆರಂಭವಾದ ಬೈಕ್‌ ರ‍್ಯಾಲಿಯು ಸುಭಾಷ್ ವೃತ್ತ, ಮುದ್ನಾಳ ಪೆಟ್ರೋಲ್ ಬಂಕ್, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಮಾರ್ಗವಾಗಿ ಗಾಂಧಿ ವೃತ್ತದವರೆಗೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.