ADVERTISEMENT

ಮೋದಿ ತಪ್ಪು ನೀತಿಯಿಂದ ಕಾರ್ಮಿಕರು ಬೀದಿಪಾಲು: ಶಾಂತವೀರ ನಾಯ್ಕ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2019, 9:59 IST
Last Updated 5 ಏಪ್ರಿಲ್ 2019, 9:59 IST
ಶಾಂತವೀರ ನಾಯ್ಕ
ಶಾಂತವೀರ ನಾಯ್ಕ   

ಹೊಸಪೇಟೆ: ‘ಪ್ರಧಾನಿ ನರೇಂದ್ರ ಮೋದಿಯವರ ತಪ್ಪು ಆರ್ಥಿಕ ನೀತಿಗಳಿಂದಾಗಿ ದೇಶದ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು ಬಂದ್‌ ಆಗಿವೆ. ಅಸಂಘಟಿತ ಕಾರ್ಮಿಕರು ಬೀದಿ ಪಾಲಾಗಿದ್ದಾರೆ’ ಎಂದು ಕಾಂಗ್ರೆಸ್‌ ಅಸಂಘಟಿತ ಕಾರ್ಮಿಕರ ಘಟಕದ ರಾಜ್ಯ ಅಧ್ಯಕ್ಷ ಶಾಂತವೀರ ನಾಯ್ಕ ಆರೋಪಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನೋಟು ಅಮಾನ್ಯೀಕರಣ, ಸರಕು ಮತ್ತು ಸೇವಾ ತೆರಿಗೆಯಿಂದ (ಜಿ.ಎಸ್‌.ಟಿ.) ಬಡವರು, ಮಧ್ಯಮ ವರ್ಗದವರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಸಂಘಟಿತ ಕಾರ್ಮಿಕರು ತೊಂದರೆಗೆ ಈಡಾಗಿದ್ದಾರೆ’ ಎಂದು ತಿಳಿಸಿದರು.

‘ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ಜಗತ್ತಿನಲ್ಲಿ ಆರ್ಥಿಕ ಹಿಂಜರಿತ ಉಂಟಾಗಿತ್ತು. ಅಮೆರಿಕ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಜನ ಉದ್ಯೋಗ ಕಳೆದುಕೊಂಡಿದ್ದರು. ಆದರೆ, ಸಿಂಗ್‌ ಅವರ ದೂರದೃಷ್ಟಿಯಿಂದ ಭಾರತದಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾಗಿರಲಿಲ್ಲ. ಅಷ್ಟೇ ಅಲ್ಲ, ಒಟ್ಟು ಬೆಳವಣಿಗೆ ದರ ಏರುಮುಖವಾಗಿತ್ತು. ಸುಳ್ಳು ಭರವಸೆಗಳ ಮೂಲಕ ಅಧಿಕಾರಕ್ಕೆ ಬಂದ ಮೋದಿಯವರು, ಜನರಿಗಾಗಿ ಏನೂ ಮಾಡಲಿಲ್ಲ. ದೇಶ ಆರ್ಥಿಕವಾಗಿ ದಿವಾಳಿಯಾಗುವ ಹಂತಕ್ಕೆ ತಂದು ನಿಲ್ಲಿಸಿದ್ದಾರೆ’ ಎಂದು ಹೇಳಿದರು.

ADVERTISEMENT

‘ನಾಲ್ಕೂವರೆ ವರ್ಷ ಏನೂ ಮಾಡದ ಮೋದಿಯವರು ಚುನಾವಣೆ ಸಂದರ್ಭದಲ್ಲಿ ರೈತರ ಖಾತೆಗಳಿಗೆ ಹಣ ಜಮೆ ಮಾಡುತ್ತಿದ್ದಾರೆ. ಅಸಂಘಟಿತ ಕಾರ್ಮಿಕರ ಉದ್ಧಾರದ ಮಾತುಗಳನ್ನು ಆಡುತ್ತಿದ್ದಾರೆ. ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಿಸುವ ಮಾತುಗಳನ್ನು ಆಡುತ್ತಿದ್ದಾರೆ. ರಾಜ್ಯವೊಂದರಲ್ಲೇ ಶೇ 77ರಷ್ಟು ಅಸಂಘಟಿತ ಕಾರ್ಮಿಕರಿದ್ದಾರೆ. ಅವರ ಬದುಕು ದಯನೀಯವಾಗಿದೆ’ ಎಂದು ವಿವರಿಸಿದರು.

‘ಅಸಂಘಟಿತ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅನೇಕ ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದ್ದೇವೆ. ಆದರೆ, ಮೋದಿಯವರು ಅದಕ್ಕೆ ಕಿವಿಗೊಟ್ಟಿಲ್ಲ. ಅವರ ಹಿತ ಕಾಪಾಡಬೇಕೆಂದು ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್‌ ಗಾಂಧಿಯವರ ಬಳಿ ನಿಯೋಗ ಹೋಗಿ ಮನವಿ ಮಾಡಿಕೊಂಡಾಗ, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಸಂಘಟಿತ ಕಾರ್ಮಿಕರು, ಬಡತನ ರೇಖೆಗಿಂತ ಕೆಳಗಿರುವವರಿಗೆ ನಿಶ್ಚಿತ ಆದಾಯ, ಜೀವನ ಭದ್ರತೆ ಒದಗಿಸುವ ವಿಷಯವನ್ನು ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿದ್ದಾರೆ’ ಎಂದು ಹೇಳಿದರು.

‘ಖನಿಜ ನಿಧಿಯಲ್ಲಿ ಸಂಗ್ರಹವಾಗಿರುವ ಒಟ್ಟು ಹಣದ ಪೈಕಿ ₹2 ಸಾವಿರ ಕೋಟಿಯನ್ನು ಗಣಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅಸಂಘಟಿತ ಕಾರ್ಮಿಕರು ಸ್ವಯಂ ಉದ್ಯೋಗ ಕೈಗೊಳ್ಳಲು ಮೀಸಲಿಡಬೇಕು. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಪುನರ್‌ ರಚಿಸಬೇಕು. ಸರ್ಕಾರದ ಎಲ್ಲ ಯೋಜನೆಗಳ ಲಾಭ ಅಸಂಘಟಿತ ಕಾರ್ಮಿಕರಿಗೆ ತಲುಪುವಂತೆ ನೋಡಿಕೊಳ್ಳುವ ಅಗತ್ಯವಿದೆ’ ಎಂದು ಪ್ರತಿಪಾದಿಸಿದರು.

ರಾಜ್ಯ ಸಂಚಾಲಕಿ ನಾಗವೇಣಿ, ಸಮಿತಿಯ ಬಳ್ಳಾರಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ವಿ. ಸೋಮಪ್ಪ, ಉಪಾಧ್ಯಕ್ಷ ಸಣ್ಣ ಮಾರೆಪ್ಪ, ಕೊಪ್ಪಳ ಜಿಲ್ಲೆ ಕಾರ್ಯಾಧ್ಯಕ್ಷ ಕಾಳಪ್ಪ ರಾಠೋಡ, ಉಪಾಧ್ಯಕ್ಷೆ ಗೀತಾ ಶ್ರೀನಿವಾಸ, ಮುಖಂಡರಾದ ರಾಮಜೀ ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.