ADVERTISEMENT

ಮತದಾನ ಹೆಚ್ಚಿಸಲು ವಿವಿಧ ಸ್ಪರ್ಧೆ: ಜಿಲ್ಲಾಧಿಕಾರಿ ಮಂಜುನಾಥ್‌

​ಪ್ರಜಾವಾಣಿ ವಾರ್ತೆ
Published 3 ಮೇ 2019, 12:29 IST
Last Updated 3 ಮೇ 2019, 12:29 IST
ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶಕ್ಕಾಗಿ ಜಿಲ್ಲಾ ಸ್ವೀಪ್‌ ಸಮಿತಿಯು ಕೋಲಾರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಾಲಿಬಾಲ್‌ ಪಂದ್ಯಾವಳಿಯಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಪಾಲ್ಗೊಂಡರು.
ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶಕ್ಕಾಗಿ ಜಿಲ್ಲಾ ಸ್ವೀಪ್‌ ಸಮಿತಿಯು ಕೋಲಾರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಾಲಿಬಾಲ್‌ ಪಂದ್ಯಾವಳಿಯಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಪಾಲ್ಗೊಂಡರು.   

ಕೋಲಾರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ಕಡ್ಡಾಯ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಇಲ್ಲಿ ಶನಿವಾರ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ವಿವಿಧ ಸ್ಪರ್ಧೆ ನಡೆಸಲಾಯಿತು.

ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಜೆ.ಮಂಜುನಾಥ್, ‘ಮತದಾನದ ಮಹತ್ವ ಕುರಿತು ಅರಿವು ಮೂಡಿಸುವ ಉದ್ದೇಶಕ್ಕೆ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. 18 ವರ್ಷ ತುಂಬಿದ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

‘ಕ್ರೀಡೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ಬಹುಮಾನ ಪಡೆಯುವುದರ ಜತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ಬಡವ ಶ್ರೀಮಂತರೆಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಮತದಾನದ ಹಕ್ಕು ನೀಡಲಾಗಿದೆ. ದೇಶದಲ್ಲಿ ಲೋಕಸಭಾ ಚುನಾವಣೆ ನಿಗದಿಯಾಗಿದ್ದು, ಇದಕ್ಕೆ ಪೂರ್ವಭಾವಿಯಾಗಿ ಜಿಲ್ಲೆಯಲ್ಲಿ 6 ತಿಂಗಳಿಂದ ಸುಮಾರು 1,600 ಮಂದಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಹೋಗಿ ಮತದಾರರ ಪಟ್ಟಿಗೆ ಮತದಾರರ ಹೆಸರು ಸೇರಿಸಿದ್ದಾರೆ. ಕ್ಷೇತ್ರದಲ್ಲಿ ಒಟ್ಟಾರೆ 16 ಲಕ್ಷ ಮತದಾರರಿದ್ದಾರೆ’ ಎಂದು ವಿವರಿಸಿದರು.

‘ಚುನಾವಣೆಗೆ ಸಕಲ ಸಿದ್ಧತೆ ಮಾಡಲಾಗಿದ್ದು, ಕ್ಷೇತ್ರದಲ್ಲಿ 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಏ.18ರಂದು ಮತದಾನ ನಡೆಯಲಿದ್ದು, ಮತದಾರರು ಮತ್ತು ಮತದಾರರಲ್ಲದವರೂ ಕೂಡ ಮತದಾನದ ಬಗ್ಗೆ ತಿಳಿವಳಿಕೆ ನೀಡಿ ಶೇ 100ರಷ್ಟು ಮತದಾನವಾಗುವಂತೆ ಮಾಡಬೇಕು’ ಎಂದು ತಿಳಿಸಿದರು.

ಪೋತ್ಸಾಹ ನೀಡುತ್ತಿದೆ: ‘ಜಿಲ್ಲಾಡಳಿತವು ಕ್ರೀಡಾ ಚಟುವಟಿಕೆಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಹೆಚ್ಚಿನ ಪೋತ್ಸಾಹ ನೀಡುತ್ತಿದೆ. ಸಂವಿಧಾನಬದ್ಧವಾಗಿ ಬಂದಿರುವ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಬೇಕು’ ಎಂದು ಜಿಲ್ಲಾ ಚುನಾವಣಾ ರಾಯಭಾರಿಯಾದ ಕ್ರೀಡಾಪಟು ಅನಿತಾ ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಜಗದೀಶ್ ಕಡ್ಡಾಯ ಮತ್ತು ನೈತಿಕ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ಸ್ವೀಪ್ ಸಮಿತಿ ಕಾರ್ಯದರ್ಶಿ ಸೌಮ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ನಯ್ಯ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎ.ನಾರಾಯಣಸ್ವಾಮಿ, ನಗರಸಭೆ ಆಯುಕ್ತ ಸತ್ಯನಾರಾಯಣ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಮಂಜುನಾಥ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.