ADVERTISEMENT

ಬೆಂಗಳೂರು ಚಿತ್ರೋತ್ಸವ: ಲಾಂಛನ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 16:23 IST
Last Updated 19 ಫೆಬ್ರುವರಿ 2021, 16:23 IST
ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 13ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಅನಾವರಣಗೊಳಿಸಿದರು. ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್‌ ಪುರಾಣಿಕ್‌, ನಟಿಯರಾದ ಶೃತಿ, ತಾರಾ ಅನೂರಾಧಾ ಮತ್ತಿತರರು ಇದ್ದರು
ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 13ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಅನಾವರಣಗೊಳಿಸಿದರು. ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್‌ ಪುರಾಣಿಕ್‌, ನಟಿಯರಾದ ಶೃತಿ, ತಾರಾ ಅನೂರಾಧಾ ಮತ್ತಿತರರು ಇದ್ದರು   

ಬೆಂಗಳೂರು: ‘ಭಾರತೀಯ ಪ್ರದರ್ಶನ ಕಲೆಗಳ ಮಹತ್ವ’ ಎಂಬ ವಿಷಯದ ಅಡಿಯಲ್ಲಿ ಮಾರ್ಚ್‌ 24ರಿಂದ 31ರವರೆಗೆ 13ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಚಿತ್ರೋತ್ಸವದ ದಿನಾಂಕವನ್ನು ಅಂತಿಮಗೊಳಿಸಲಾಯಿತು. 13ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನೂ ಮುಖ್ಯಮಂತ್ರಿ ಇದೇ ಸಭೆಯಲ್ಲಿ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಯಡಿಯೂರಪ್ಪ, ‘ಕೋವಿಡ್‌ ಮಾರ್ಗಸೂಚಿಗಳಿಗೆ ಅನುಸಾರವಾಗಿ ಚಿತ್ರೋತ್ಸವ ನಡೆಸಬೇಕು. ಈ ಬಾರಿ ಬೆಂಗಳೂರು ಚಿತ್ರೋತ್ಸವಕ್ಕೆ ಅಂತರರಾಷ್ಟ್ರೀಯ ಚಲನಚಿತ್ರ ನಿರ್ಮಾಪಕರ ಒಕ್ಕೂಟದ (ಎಫ್‌ಐಎಪಿಎಫ್‌) ಮಾನ್ಯತೆ ದೊರಕುವ ನಿರೀಕ್ಷೆ ಇದೆ. ಈಗಾಗಲೇ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿರುವ ಬೆಂಗಳೂರು ಚಿತ್ರೋತ್ಸವಕ್ಕೆ ಇದು ಹೆಮ್ಮೆಯ ಸಂಗತಿಯಾಗಲಿದೆ’ ಎಂದರು.

ADVERTISEMENT

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ ಸಚಿವ ಸಿ.ಸಿ. ಪಾಟೀಲ ಮಾತನಾಡಿ, ‘ರಾಜಾಜಿನಗರದ ಒರಾಯನ್‌ ಮಾಲ್‌ನ ಪಿವಿಆರ್‌ ಚಿತ್ರಮಂದಿರದ 11 ಪರದೆಗಳಲ್ಲಿ 50ಕ್ಕೂ ಹೆಚ್ಚು ದೇಶಗಳ 200 ಅತ್ಯುತ್ತಮ ಸಿನಿಮಾಗಳನ್ನು ಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗುವುದು’ ಎಂದು ತಿಳಿಸಿದರು.

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್‌ ಪುರಾಣಿಕ್‌ ಮಾತನಾಡಿ, ‘ಏಷ್ಯನ್‌ ಸಿನಿಮಾ, ಭಾರತೀಯ ಸಿನಿಮಾ (ಚಿತ್ರ ಭಾರತಿ) ಮತ್ತು ಕನ್ನಡ ಸಿನಿಮಾ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ವಿಶ್ವ ಸಿನಿಮಾ, ಸಿಂಹಾವಲೋಕನ, ಗ್ರ್ಯಾಂಡ್‌ ಕ್ಲಾಸಿಕ್‌, ಅಗಲಿರುವ ವಿಶ್ವದ, ಭಾರತದ ಮತ್ತು ಕನ್ನಡ ಚಿತ್ರಂಗದ ಗಣ್ಯರ ಸ್ಮರಣೆ, ಅಂತರರಾಷ್ಟ್ರೀಯ ಸಿನಿಮಾ ವಿಮರ್ಶಕರ ಒಕ್ಕೂಟದ ಪ್ರಶಸ್ತಿ ವಿಭಾಗ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಲಾಗುವುದು’ ಎಂದರು.

ಅತ್ಯುತ್ತಮ ಸಿನಿಮಾ ಪ್ರದರ್ಶನದ ಜತೆಗೆ ದೇಶ ಮತ್ತು ವಿದೇಶಗಳ ಪ್ರಸಿದ್ಧ ನಿರ್ದೇಶಕರು, ಕಲಾವಿದರು, ತಂತ್ರಜ್ಞರೊಂದಿಗೆ ಸಂವಾದಗಳೂ ನಡೆಯಲಿವೆ. ಕನ್ನಡ ಸಿನಿಮಾ ರಂಗದ ಸೃಜನಶೀಲ ಮುಖಗಳನ್ನು ಇತರ ರಾಷ್ಟ್ರಗಳಿಗೆ ಪರಿಚಯಿಸುವ ಕೆಲಸವೂ ಆಗಲಿದೆ ಎಂದು ಹೇಳಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್.ಜೈರಾಜ್, ನಟಿಯರಾದ ಶೃತಿ, ತಾರಾ ಅನೂರಾಧಾ, ಚಲನಚಿತ್ರ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ವಾರ್ತಾ ಇಲಾಖೆ ಕಾರ್ಯದರ್ಶಿ ಅಂಜುಂ ಪರ್ವೇಜ್, ಆಯುಕ್ತ ಪಿ.ಎಸ್.ಹರ್ಷ ಉಪಸ್ಥಿತರಿದ್ದರು.

ಪುಟ್ಟಣ್ಣ ಕಣಗಾಲ್‌ ಮನೆ ಸಂರಕ್ಷಣೆಗೆ ಸಮ್ಮತಿ

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮನೆಯನ್ನು ಸ್ಮಾರಕವನ್ನಾಗಿ ಮಾಡಿ, ಪುನರುಜ್ಜೀವನಗೊಳಿಸುವ ಯೋಜನೆಗೆ ಪ್ರಸ್ತಾವ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ವಾರ್ತಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಚಿವ ಸಿ.ಸಿ. ಪಾಟೀಲ ಅವರು ಪುಟ್ಟಣ್ಣ ಕಣಗಾಲ್‌ ಅವರ ಮನೆಯನ್ನು ಸ್ಮಾರಕವನ್ನಾಗಿ ಪರಿವರ್ತಿಸುವ ಕುರಿತು ಪ್ರಸ್ತಾಪಿಸಿದಾಗ ಮುಖ್ಯಮಂತ್ರಿ ಸಮ್ಮತಿಸಿದರು. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಹೆಚ್ಚುವರಿಯಾಗಿ ₹ 7.5 ಕೋಟಿ ಅನುದಾನ ಮಂಜೂರು ಮಾಡಬೇಕೆಂಬ ಪ್ರಸ್ತಾವಕ್ಕೂ ಒಪ್ಪಿಗೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.