ADVERTISEMENT

ಚಿತ್ರರಂಗದ 3000 ಕಾರ್ಮಿಕರಿಗೆ ತಲಾ ₹5000 ಪರಿಹಾರ ಘೋಷಿಸಿದ ನಟ ಯಶ್

​ಪ್ರಜಾವಾಣಿ ವಾರ್ತೆ
Published 1 ಜೂನ್ 2021, 14:21 IST
Last Updated 1 ಜೂನ್ 2021, 14:21 IST
ಯಶ್‌
ಯಶ್‌   

ಬೆಂಗಳೂರು: ಕೋವಿಡ್‌ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿರುವ ಲಾಕ್‌ಡೌನ್‌ ಕಾರಣದಿಂದಾಗಿ ಸಿನಿಮಾ ಚಿತ್ರೀಕರಣ ಕಳೆದ ನಾಲ್ಕು ತಿಂಗಳಿಂದ ಸಂಪೂರ್ಣ ಸ್ತಬ್ಧವಾಗಿದ್ದು, ಸಾವಿರಾರು ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹವರ ನೆರವಿಗೆ ಇದೀಗ ನಟ ಯಶ್‌ ಕೂಡಾ ಮುಂದಾಗಿದ್ದಾರೆ. ಮೂರು ಸಾವಿರಕ್ಕೂ ಅಧಿಕ ಚಿತ್ರರಂಗದ ಕಲಾವಿದರು, ಕಾರ್ಮಿಕರ ಖಾತೆಗೆ ತಲಾ ₹5 ಸಾವಿರ ಆರ್ಥಿಕ ನೆರವನ್ನು ನೀಡಲು ನಿರ್ಧರಿಸಿದ್ದಾರೆ.

‘ಕಣ್ಣಿಗೆ ಕಾಣದ ವೈರಸ್‌ ಮನುಷ್ಯನ ಬದುಕನ್ನು ಹೆಚ್ಚುಕಮ್ಮಿ ಬುಡಮೇಲು ಮಾಡಿದೆ. ಅದರಲ್ಲೂ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈಕಟ್ಟಿ ಕುಳಿತಿದೆ. ಹೌದು. ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ. ಹಾಗಾಗಿ ಚಿತ್ರರಂಗದ 21 ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 3,000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ ₹5 ಸಾವಿರವನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ.ಗೋವಿಂದ್‌ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್‌ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್‌ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ’ ಎಂದು ಯಶ್‌ ತಿಳಿಸಿದ್ದಾರೆ.

ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲ ಕಷ್ಟಗಳಿಗೂ ಪರಿಹಾರ ಎಂಬುವುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಸಹಾಯ ಮಾಡಿದರೆ, ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎನ್ನುವುದು ನನ್ನ ಆಶಯ’ ಎಂದು ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಯಶ್‌ ಉಲ್ಲೇಖಿಸಿದ್ದಾರೆ.

ADVERTISEMENT

ಈಗಾಗಲೇ ನಟರಾದ ಉಪೇಂದ್ರ, ಸುದೀಪ್‌, ಸಾಧುಕೋಕಿಲ ಮುಂತಾದವರು ಸಂಕಷ್ಟದಲ್ಲಿರುವ ಚಿತ್ರರಂಗದ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರಿಗೆ ಆರ್ಥಿಕ ನೆರವು ಹಾಗೂ ದಿನಸಿ ಕಿಟ್‌ಗಳನ್ನು ವಿತರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.