ದರ್ಶನ್ ತೂಗುದೀಪ ಮತ್ತು ರಮ್ಯಾ
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಸೇರಿ ಏಳು ಜನರ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ.
ಈ ಕುರಿತು ಪ್ರತಿಕ್ರಿಯಿಸಿ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟಿ ರಮ್ಯಾ, ‘ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ‘ಕಾನೂನಿನ ಮುಂದೆ ಎಲ್ಲರೂ ಸಮಾನರು’ ಎನ್ನುವ ಬಲವಾದ ಸಂದೇಶವನ್ನು ರವಾನಿಸುತ್ತದೆ’ ಎಂದು ಬರೆದುಕೊಂಡಿದ್ದಾರೆ.
'ನಾನು ಹೇಳುವುದೇನೆಂದರೆ, ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಳ್ಳಿ. ನ್ಯಾಯ ಸಿಗುವ ಪ್ರಕ್ರಿಯೆ ದೀರ್ಘ ಮತ್ತು ಕಠಿಣ ಹಾದಿಯಾದರೂ, ಕೊನೆಯಲ್ಲಿ ಬೆಳಕು ಇರುತ್ತದೆ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ದೊರಕುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ, ಸತ್ಯವಂತರಾಗಿರಿ’ ಎಂದು ಬರೆದುಕೊಂಡಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ರಮ್ಯಾ ಅವರು ಹಂಚಿಕೊಂಡ ಪೋಸ್ಟ್‌ಗೆ ದರ್ಶನ್ ಅಭಿಮಾನಿಗಳು ಅಶ್ಲೀಲವಾಗಿ ಸಂದೇಶ ಕಳಿಸಿದ್ದರು ಎಂದು ದೂರು ನೀಡಿ, ಕಠಿಣ ಕಾನೂನಿನ ಕ್ರಮಕ್ಕೆ ಆಗ್ರಹಿಸಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ಅಶ್ಲೀಲ ಸಂದೇಶ ಕಳುಹಿಸಿದ್ದ ಕೆಲವರನ್ನು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.