ADVERTISEMENT

ಜೈಲಿನಲ್ಲಿ ದರ್ಶನ್: ಜಾಲತಾಣದಲ್ಲಿ ಹರಿದಾಡಿದ ಫೋಟೊ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2025, 0:06 IST
Last Updated 18 ಆಗಸ್ಟ್ 2025, 0:06 IST
ದರ್ಶನ್, ಪವಿತ್ರಾ ಗೌಡ
ದರ್ಶನ್, ಪವಿತ್ರಾ ಗೌಡ   

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಮತ್ತೆ ಜೈಲು ಸೇರಿರುವ ನಟ ದರ್ಶನ್ ಮತ್ತು ಸ್ನೇಹಿತೆ ಪವಿತ್ರಾ ಗೌಡ ಅವರ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಬಿಗಿ ಪೊಲೀಸ್ ಭದ್ರತೆ ಇರುವ ಜೈಲಿನಲ್ಲಿ ಮೊಬೈಲ್ ಬಳಕೆಗೆ ಅವಕಾಶ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ದರ್ಶನ್, ಪವಿತ್ರಾ ಅವರ ಫೋಟೊ ವಿಚಾರವಾಗಿ ಕೈದಿಗಳಿಗೆ ಮೊಬೈಲ್ ಬಳಕೆಗೆ ಅವಕಾಶ ಇದೆಯೇ ಎಂದು ಹಲವರು ಪೊಲೀಸ್ ಅಧಿಕಾರಿಗಳು ಮತ್ತು ಜೈಲು ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದಾರೆ.

‘ರಾಜ್ಯದ ಎಲ್ಲಾ ಕಾರಾಗೃಹಗಳಲ್ಲಿ ಕೈದಿಗಳು ಮೊಬೈಲ್ ಫೋನ್‌ ಹಾಗೂ ಸಂವಹನ ಉದ್ದೇಶಕ್ಕಾಗಿ ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಸಾಧನಗಳು, ಯಾವುದೇ ರೀತಿಯ ಮಾದಕ ವಸ್ತುಗಳು, ನಿಷೇಧಿತ ವಸ್ತುಗಳ ಬಳಕೆಗೆ ಅವಕಾಶ ಇಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಪೊಲೀಸ್ ಇಲಾಖೆ ಮತ್ತು ಜೈಲು ಅಧಿಕಾರಿಗಳು ಅನಿರೀಕ್ಷಿತ ತಪಾಸಣೆ ನಡೆಸುವ ಮೂಲಕ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ. ಈವರೆಗೆ ಒಟ್ಟು 88 ಪ್ರಕರಣಗಳು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಅದರಲ್ಲಿ ಮೊಬೈಲ್ ಬಳಕೆಗೆ ಸಂಬಂಧಿಸಿದಂತೆ 35 ಪ್ರಕರಣಗಳು ದಾಖಲಾಗಿವೆ. ಇನ್ನು ಮಾದಕ ವಸ್ತುಗಳಿಗೆ ಸಂಬಂಧಿಸಿದಂತೆ 4 ಪ್ರಕರಣಗಳು ಹಾಗೂ ಕೈದಿಗಳ ನಡುವೆ ಗಲಾಟೆ ಹಾಗೂ ಇತರ ಪ್ರಕರಣಗಳಿಗೆ ಸಂಬಂಧಿಸಿದಂತೆ 49 ಪ್ರಕರಣಗಳು ದಾಖಲಾಗಿವೆ. ಕಾರಾಗೃಹದ ಒಳಗೆ ಸರಬರಾಜು ಆಗುವ ವಸ್ತುಗಳನ್ನು ತಪಾಸಣೆಗೆ ಒಳಪಡಿಸಲು ಮೂರು ಹೊಸ ಬ್ಯಾಗೇಜ್ ಸ್ಕ್ಯಾನರ್ ಯಂತ್ರಗಳನ್ನು ಬಳಸಿಕೊಳ್ಳಲಾಗುತ್ತಿದೆ’ ಎಂದು ಮೂಲಗಳು ತಿಳಿಸಿವೆ.

ಮತ್ತೆ ಬಳ್ಳಾರಿ ಜೈಲಿಗೆ?

ದರ್ಶನ್ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸುವ ಕುರಿತು ಚರ್ಚೆ ನಡೆಯುತ್ತಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪಡೆದ ಆರೋಪದ ಮೇರೆಗೆ ದರ್ಶನ್ ಅವರನ್ನು ಈ ಹಿಂದೆ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಹೈಕೋರ್ಟ್ ಜಾಮೀನು ಘೋಷಿಸಿದಾಗ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಅವರು ಬಿಡುಗಡೆಯಾಗಿದ್ದರು. ಈಗ ಮತ್ತೆ ಅಲ್ಲಿಗೆ ಸ್ಥಳಾಂತರ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.