ADVERTISEMENT

74ನೇ ಕಾನ್ ಚಿತ್ರೋತ್ಸವದಲ್ಲಿ ‘ದೇವರ ಕನಸು’

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 11:51 IST
Last Updated 11 ಜುಲೈ 2021, 11:51 IST
ದೇವರ ಕನಸು ಚಿತ್ರದ ದೃಶ್ಯ
ದೇವರ ಕನಸು ಚಿತ್ರದ ದೃಶ್ಯ   

ಮಿಲೇನಿಯಮ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿ, ನಿರ್ದೇಶಕ ಸುರೇಶ್ ಲಕ್ಕೂರ್ ನಿರ್ದೇಶನದಲ್ಲಿ ತಯಾರಾದ ದೇವರ ಕನಸು ಸಿನಿಮಾ ಪ್ರತಿಷ್ಠಿತ 74ನೇ ಕಾನ್ ಸಿನಿಮೋತ್ಸದ ವೇಳೆ ಅದರ ಮಾರುಕಟ್ಟೆ ವಿಭಾಗ, ಮಾರ್ಷ್ ಡು ಫಿಲಂನಲ್ಲಿ ಪ್ರದರ್ಶನ ಕಂಡಿದೆ. ಆನ್‌ಲೈನ್‌ನಲ್ಲಿ ಪ್ರದರ್ಶನ ನಡೆದಿದೆ.

ಸಾಮಾಜಿಕ ಸಂದೇಶ ಸಾರುವ ಈ ಸಿನಿಮಾದಲ್ಲಿ 12 ವರ್ಷದ ಬಾಲಕನ ಸೈಕಲ್ ಪಡೆದುಕೊಳ್ಳುವ ಕನಸಿನ ಸುತ್ತ ನಿರ್ದೇಶಕರು ಕಥೆ ಹೆಣೆದಿದ್ದಾರೆ. ಸ್ವಂತ ಸೈಕಲ್ ಖರೀದಿಸಿ ಊರ ಸೈಕಲ್ ರೇಸ್‌ನಲ್ಲಿ ಗೆಲುವು ಸಾಧಿಸುವುದು ಆತನ ಮುಖ್ಯ ಉದ್ದೇಶ. ಅದನ್ನು ಈಡೇರಿಸಿಕೊಳ್ಳಲು ಬಾಲಕ ಏನೆಲ್ಲ ಹರಸಾಹಸ ಮಾಡುತ್ತಾನೆ ಎಂಬುದೇ ದೇವರ ಕನಸು ಚಿತ್ರದ ಎಳೆ.

2019ರಲ್ಲಿ ಶೂಟಿಂಗ್ ಆರಂಭಿಸಿದ್ದ ಈ ಸಿನಿಮಾ, ಒಟ್ಟು 29 ದಿನಗಳಲ್ಲಿ ಸಂಪೂರ್ಣ ಶೂಟಿಂಗ್ ಮುಗಿಸಿತ್ತು.

ADVERTISEMENT

ಈ ಚಿತ್ರಕ್ಕೆ ಪ್ಯಾನ್ ಇಂಡಿಯಾ ತಂತ್ರಜ್ಞರು ಕೆಲಸ ಮಾಡಿದ್ದಾರೆ. ರತ್ನಜಿತ್ ರಾಯ್ ಛಾಯಾಗ್ರಹಣ, ಅನಿರ್ಬನ್ ಗಂಗೂಲಿ ಸೌಂಡ್ ಡಿಸೈನಿಂಗ್, ಸಂಕಲನ ಜಿಸ್ನು ಸೇನ್ ಇವರೆಲ್ಲ ಪಶ್ಚಿಮ ಬಂಗಾಳದವರು. ಅದೇ ರೀತಿ ಚೆನ್ನೈ ಮೂಲದ ನಿತ್ಯಾನಂದ ಅವರು ಧ್ವನಿ ತಂತ್ರಜ್ಞ, ಸುಂದರ್ ಆರ್ ಅವರು ಸಂಗೀತ ನೀಡಿದ್ದಾರೆ. ಕೇರಳ ಮೂಲದ ಜಿಷಾ ಮ್ಯಾಥ್ಯು ವಸ್ತ್ರ ವಿನ್ಯಾಸ ಮಾಡಿದ್ದಾರೆ. ಮತ್ತೋರ್ವ ಮನೋಜ್ ಅಂಗಮಾಲಿ ಮೇಕಪ್ ಜವಾಬ್ದಾರಿ ನಿಭಾಯಿಸಿದ್ದಾರೆ. ಕರ್ನಾಟಕದ ಲಿಂಗರಾಜ್ ಇತಿಹಾಸ್ ಸಂಭಾಷಣೆ ಮತ್ತು ಸಾಹಿತ್ಯ ಬರೆದರೆ, ಚನ್ನಬಸವ ಪ್ರೊಡಕ್ಷನ್ ಡಿಸೈನರ್ ಆಗಿ ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ. ಈ ಸಿನಿಮಾಕ್ಕೆ ಸುನೀಲ್ ರಾಮ್ ಕಥೆ ಬರೆದಿದ್ದಾರೆ.
ನಿರ್ದೇಶಕ ಸುರೇಶ್ ಲಕ್ಕೂರ್ ನ್ಯೂಯಾರ್ಕ್ ಸಿನಿಮಾ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದಾರೆ. ದೇವರ ಕನಸು ಅವರ ಮೊದಲ ಚಿತ್ರ. ಮಕ್ಕಳ ಸಿನಿಮಾ ಮೂಲಕ ಆಗಮಿಸಿದ್ದಾರೆ. ಚಿಂತಾಮಣಿಯ ಬಳಿಯ ಹಿರೇಪಳ್ಳಿ. ಕನಂಪಲ್ಲಿ, ಕೈವಾರ ಸುತ್ತಮುತ್ತ ಚಿತ್ರದ ಚಿತ್ರೀಕರಣವಾಗಿದೆ.

ದೀಪಕ್, ಅಮೂಲ್ಯ, ಯುವರಾಜ್ ಕಿಣಿ, ಆರುಷಿ ವೇದಿಕಾ, ಮಣಿ, ರೂಪಾ, ವಿಜಯ್ ರಾಕೇಶ್ ಪಾತ್ರವರ್ಗದಲ್ಲಿದಲ್ಲಿದ್ದಾರೆ. ಈ ಚಿತ್ರಕ್ಕೆ ಸಿ. ಜಯಕುಮಾರ್, ಸಿ ಶೇಖರ್ ಬಂಡವಾಳ ಹೂಡಿದ್ದಾರೆ. ಗಂಗಾಧರ್, ಶಂಕರ್, ಸಿ ಸುಬ್ಬಯ್ಯ ಸಹನಿರ್ಮಾಪಕರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.