
ಧರ್ಮೇಂದ್ರ
ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (89) ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
‘ಹಿರಿಯ ನಟ ಮತ್ತು ಮಾಜಿ ಸಂಸತ್ ಸದಸ್ಯ ಧರ್ಮೇಂದ್ರ ಜಿ ಅವರ ನಿಧನದಿಂದ ಭಾರತೀಯ ಚಿತ್ರರಂಗಕ್ಕೆ ಅಪಾರ ನಷ್ಟವಾಗಿದೆ. ಅತ್ಯಂತ ಜನಪ್ರಿಯ ನಟರಲ್ಲಿ ಒಬ್ಬರಾದ ಅವರು ತಮ್ಮ ದಶಕಗಳ ಕಾಲದ ಸುಪ್ರಸಿದ್ಧ ವೃತ್ತಿಜೀವನದಲ್ಲಿ ಹಲವಾರು ಸ್ಮರಣೀಯ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತೀಯ ಚಿತ್ರರಂಗದ ಅತ್ಯುನ್ನತ ವ್ಯಕ್ತಿಯಾಗಿ, ಅವರು ಯುವ ಪೀಳಿಗೆಯ ಕಲಾವಿದರಿಗೆ ಸ್ಫೂರ್ತಿ ನೀಡುವ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಧರ್ಮೇಂದ್ರ ಜಿ ಅವರ ನಿಧನವು ಭಾರತೀಯ ಚಿತ್ರರಂಗದಲ್ಲಿ ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ. ಅವರು ಒಬ್ಬ ಅಪ್ರತಿಮ ಚಲನಚಿತ್ರ ನಟರಾಗಿದ್ದರು. ಅವರು ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ ರೀತಿ ಅಸಂಖ್ಯಾತ ಜನರನ್ನು ಆಕರ್ಷಿಸಿತ್ತು. ಧರ್ಮೇಂದ್ರ ಜಿ ಅವರು ಸರಳತೆ, ನಮ್ರತೆಗೆ ಸಮಾನವಾಗಿ ಮೆಚ್ಚುಗೆ ಪಡೆದಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ’ ಎಂದು ಪ್ರಧಾನಿ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ತಮ್ಮ ಅದ್ಭುತ ನಟನೆಯಿಂದ 6 ದಶಕಗಳ ಕಾಲ ಪ್ರತಿಯೊಬ್ಬ ದೇಶವಾಸಿಗಳ ಹೃದಯವನ್ನು ಮುಟ್ಟಿದ ಧರ್ಮೇಂದ್ರ ಜಿ ಅವರ ನಿಧನವು ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಸಾಮಾನ್ಯ ಕುಟುಂಬದಿಂದ ಬಂದ ಅವರು ಚಲನಚಿತ್ರ ಜಗತ್ತಿನಲ್ಲಿ ತಮ್ಮ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಕಲೆಯ ಮೂಲಕ ಅವರು ಕೋಟ್ಯಂತರ ವೀಕ್ಷಕರ ಹೃದಯಗಳನ್ನು ಗೆದ್ದಿದ್ದಾರೆ. ಅವರು ಯಾವಾಗಲೂ ನಮ್ಮ ನಡುವೆಯೇ ಇರುತ್ತಾರೆ ಎಂದು ಭಾವಿಸುತ್ತೇನೆ. ಅಗಲಿದ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ ಮತ್ತು ಅವರ ಕುಟುಂಬ, ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ.
‘ಭಾರತೀಯ ಚಿತ್ರರಂಗದ ಅತ್ಯಂತ ಪ್ರೀತಿಯ ಐಕಾನ್‌ಗಳಲ್ಲಿ ಒಬ್ಬರಾದ ಹಿರಿಯ ನಟ ಧರ್ಮೇಂದ್ರ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ಅವಿಸ್ಮರಣೀಯ ಅಭಿನಯ ಮತ್ತು ಚಲನಚಿತ್ರ ಸಂಸ್ಕೃತಿಗೆ ನೀಡಿದ ಕೊಡುಗೆ ಯುವ ಪೀಳಿಗೆಯ ಕಲಾವಿದರಿಗೆ ಸ್ಫೂರ್ತಿ ನೀಡಲಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಂತಾಪಗಳು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.