ಬೆಂಗಳೂರು: ವರದಕ್ಷಿಣೆ ಕಿರುಕುಳದ ವಿಚಾರವಾಗಿ ನಿರ್ದೇಶಕ ಎಸ್.ನಾರಾಯಣ್ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಜ್ಞಾನಭಾರತಿ ಠಾಣೆಯ ಪೊಲೀಸರು ರಾಜರಾಜೇಶ್ವರಿ ನಗರದ ಮನೆಯಲ್ಲಿ ಶುಕ್ರವಾರ ಸ್ಥಳ ಮಹಜರು ನಡೆಸಿದರು.
ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದಡಿ ಎಸ್.ನಾರಾಯಣ್, ಅವರ ಪತ್ನಿ ಭಾಗ್ಯವತಿ ಹಾಗೂ ಪುತ್ರ ಪವನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಪ್ರಕರಣದ ದೂರುದಾರೆ ಪವಿತ್ರಾ ಅವರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದಾದರೂ ಸಾಕ್ಷ್ಯಗಳಿದ್ದರೆ ನೀಡುವಂತೆಯೂ ಕೋರಲಾಗಿದೆ. ನಾರಾಯಣ್ ಅವರಿಗೂ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಕರೆಸಲಾಗುವುದು ಎಂದು ಪೊಲೀಸ್ ಮೂಲಗಳು ಹೇಳಿವೆ.
ಪವಿತ್ರಾ ಅವರು ನೀಡಿದ ದೂರು ಆಧರಿಸಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 85 ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.