
ಹಂಸಲೇಖ
ಬೆಂಗಳೂರು: 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪ್ರಯುಕ್ತ ಕೊಡಮಾಡುತ್ತಿರುವ ‘ಜೀವಮಾನ ಸಾಧನೆ’ ಪ್ರಶಸ್ತಿಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಆಯ್ಕೆಯಾಗಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂದು ತನ್ನ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದೆ.
ಕನ್ನಡ ಚಲನಚಿತ್ರ ಕ್ಷೇತ್ರಕ್ಕೆ ಹಂಸಲೇಖ ಅವರು ನೀಡಿರುವ ಶ್ರೇಷ್ಠ ಕೊಡುಗೆಗಳನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ ಎಂದು ಇಲಾಖೆ ತಿಳಿಸಿದೆ.
‘ಕರ್ನಾಟಕ ಚಲನಚಿತ್ರ ಅಕಾಡೆಮಿ’ ನೇತೃತ್ವದಲ್ಲಿ ಜನವರಿ 29ರಿಂದ ಫೆಬ್ರುವರಿ 6ರವರೆಗೆ ಬೆಂಗಳೂರಿನಲ್ಲಿ 17 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆಗೊಂಡಿದೆ. ನಾಳೆ ಸಮಾರೋಪ ಸಮಾರಂಭ ನಡೆಯಲಿದೆ.
ಲುಲು ಮಾಲ್‌ನಲ್ಲಿ ಶುಕ್ರವಾರ ನಡೆಯಲಿರುವ ಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಗುರುವಾರ ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್ ವಿನೋದ್ ಚಂದ್ರ ಮತ್ತು ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ಮುರಳಿ ಪಿ.ಬಿ, ಹಂಸಲೇಖ ಅವರನ್ನು ಭೇಟಿ ಮಾಡಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗೂಂಡೂರಾವ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸಾಧು ಕೋಕಿಲ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಜಯಮಾಲಾ, ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.