ADVERTISEMENT

ಹಿರಿಯ ನಟಿ ಸರೋಜಾದೇವಿ ನಿಧನ: CM ಸಿದ್ದರಾಮಯ್ಯ, ಡಿಕೆಶಿ ಸೇರಿ ಗಣ್ಯರಿಂದ ಸಂತಾಪ

​ಪ್ರಜಾವಾಣಿ ವಾರ್ತೆ
Published 14 ಜುಲೈ 2025, 5:35 IST
Last Updated 14 ಜುಲೈ 2025, 5:35 IST
<div class="paragraphs"><p> ನಟಿ ಬಿ. ಸರೋಜಾದೇವಿ</p></div>

ನಟಿ ಬಿ. ಸರೋಜಾದೇವಿ

   

-ಪ್ರಜಾವಾಣಿ ಚಿತ್ರ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ (87) ಸೋಮವಾರ ನಿಧನರಾಗಿದ್ದಾರೆ. ಸರೋಜಾದೇವಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ADVERTISEMENT

‘ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟು ಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ‘ಅಭಿನಯ ಸರಸ್ವತಿ’ ಎಂದೇ ಖ್ಯಾತರಾಗಿದ್ದರು. ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಭಿರುಚಿಯ ಚಿತ್ರಗಳ‌ ಮೂಲಕ ಹಲವು ದಶಕಗಳ‌ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ದುಃಖತಪ್ತ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

‘ಅಭಿನಯ ಸರಸ್ವತಿಗೆ ಪ್ರೀತಿಯ ವಿದಾಯ.. ಕನ್ನಡದ ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಬಿ. ಸರೋಜಾ ದೇವಿ ಅವರ ನಿಧನದ ಸುದ್ದಿ ನೋವು ತಂದಿದೆ‌. ಕನ್ನಡ ಸೇರಿದಂತೆ ಪಂಚ ‌ಭಾಷೆಗಳಲ್ಲಿ ನಟಿಸಿ, 6 ದಶಕಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿ, ಸೈ ಎನಿಸಿಕೊಂಡಿದ್ದರು‌. ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ. ಅಪಾರ ಅಭಿಮಾನಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಓಂ ಶಾಂತಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

'ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅಭಿನಯ ಸರಸ್ವತಿ’ ಎಂದೇ ಹೆಸರುವಾಸಿಯಾಗಿದ್ದ ಶ್ರೀಮತಿ ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಸುಮಾರು 160ಕ್ಕೂ ಚಿತ್ರಗಳಲ್ಲಿ ನಾಯಕ ನಟಿಯಾಗಿ ಅಭಿನಯಿಸಿದ್ದ ಅವರ ಅಗಲಿಕೆಯಿಂದ, ಕನ್ನಡ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ. ‘ಅಭಿನಯ ಸರಸ್ವತಿ’ ಎಂದೇ ಖ್ಯಾತರಾಗಿ ಸುಮಾರು ಆರು ದಶಕಗಳ ಕಾಲ ಕನ್ನಡ ಚಿತ್ರರಂಗವಷ್ಟೇ ಅಲ್ಲದೇ ಹಿಂದಿ, ತೆಲುಗು, ತಮಿಳು ಚಿತ್ರರಂಗದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿ ಭಾರತೀಯ ಚಿತ್ರ ರಂಗದ ಶ್ರೇಷ್ಠ ನಟಿಯರ ಸಾಲಿನಲ್ಲಿ ಗುರುತಿಸಿಕೊಂಡಿದ್ದರು. ಅನೇಕ ಪೌರಾಣಿಕ ಮತ್ತು ಐತಿಹಾಸಿ ಚಿತ್ರಗಳಲ್ಲಿ ನಟಿಸಿದ್ದ ಅವರು ಕನ್ನಡಿಗರ ಮನೆ ಮಾತಾಗಿದ್ದರು. ಅವರು ಕಿತ್ತೂರು ಚೆನ್ನಮ್ಮನ ಪಾತ್ರದಲ್ಲಿ ನಟಿಸಿರುವುದು ಇನ್ನೂ ಎಲ್ಲರ ಮನದಲ್ಲಿ ಅಚ್ಚಳಿಯದೇ ಉಳಿದಿದೆ. ಅವರ ಸಾಧನೆಗೆ ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು ಅರಸಿ ಬಂದಿದ್ದವು. ಬಿ. ಸರೋಜಾದೇವಿ ನಿಧನದಿಂದ ಕನ್ನಡ ಚಿತ್ರರಂಗ ಬಡವಾದಂತಾಗಿದೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಅವರ ಕುಟುಂಬದವರಿಗೆ ಭಗವಂತ ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಚನ್ನಪಟ್ಟಣದ ದಶವಾರ ಗ್ರಾಮದವರಾದ ಬಿ. ಸರೋಜಾ ದೇವಿ ಅವರು ಬೆಂಗಳೂರಿನ ಸೇಂಟ್ ಥೆರೇಸಾ ಶಾಲೆಯಲ್ಲಿ ವಿದ್ಯಾಭ್ಯಾಸ ಪೂರೈಸಿದ್ದರು. 1953ರಲ್ಲಿ ಶ್ರೀರಾಮ ಪೂಜಾ ಚಿತ್ರದ ಪುಟ್ಟ ಪಾತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.