ರಿಷಬ್ ಶೆಟ್ಟಿ
ಚಿತ್ರ: ಹೊಂಬಾಳೆ ಫಿಲ್ಮ್ಸ್ ಇನ್‌ಸ್ಟಾಗ್ರಾಮ್
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ 'ಕಾಂತಾರ ಚಾಪ್ಟರ್ 1 ಅ. 2ರಂದು ಅದ್ಧೂರಿಯಾಗಿ ತೆರೆಕಂಡಿದೆ. ಕಾಂತಾರ ಸಿನಿಮಾ ಚಿತ್ರಮಂದಿರಗಳತ್ತ ಪ್ರೇಕ್ಷಕರನ್ನು ಸೆಳೆಯುತ್ತಿದೆ.
ಆದರೆ, ಇದರ ಮಧ್ಯೆ ಕೆಲವರು ಸಿನಿಮಾದಲ್ಲಿ ತೋರಿಸಲಾದ ದೈವದ ಪಾತ್ರಗಳನ್ನು ಅನುಕರಿಸುತ್ತಾ, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಕಾರ್ಯಕ್ರಮಗಳಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿರುವುದರ ಬಗ್ಗೆ ಕಾಂತಾರ ತಂಡ ಹಾಗೂ ಹೊಂಬಾಳೆ ಫಿಲ್ಮ್ಸ್ ಬೇಸರ ವ್ಯಕ್ತಪಡಿಸಿದೆ. ಜೊತೆಗೆ ದೈವ ಪಾತ್ರಗಳನ್ನು ಅನುಕರಿಸುವುದು, ಧ್ವನಿಯನ್ನು ಹೋಲುವುದು ಸೇರಿದಂತೆ ಈ ರೀತಿಯ ಕೃತ್ಯಗಳಿಂದ ದೂರವಿರಿ ಎಂದು ಪತ್ರದ ಮೂಲಕ ಎಚ್ಚರಿಕೆ ನೀಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹೊಂಬಾಳೆ ಫಿಲ್ಮ್ಸ್ ಪೋಸ್ಟ್ ಒಂದನ್ನು ಹಂಚಿಕೊಂಡಿದೆ.
ಹೊಂಬಾಳೆ ಫಿಲ್ಮ್ಸ್ ಪತ್ರದಲ್ಲಿ ಏನಿದೆ?
‘ತುಳುನಾಡಿನ ಸಂಸ್ಕೃತಿಯ ಪ್ರೌಢತೆಯ ಸಂಕೇತವಾದ ದೈವಾರಾಧನೆ ನಮ್ಮ ನಂಬಿಕೆ. ಭಕ್ತಿ ಹಾಗೂ ತಾಯ್ತಾಡಿನ ಹೆಮ್ಮೆಯ ಪ್ರತಿರೂಪವಾಗಿದೆ. ಕಾಂತಾರ ಮತ್ತು ಕಾಂತಾರ ಚಾಪ್ಟರ್-1 ಚಿತ್ರಗಳನ್ನು ನಾವು ಗೌರವದೊಂದಿಗೆ ದೈವಗಳ ಮಹಿಮೆಯನ್ನು ಕೊಂಡಾಡುವ ಸದುದ್ದೇಶದಿಂದ ನಿರ್ಮಿಸಿದ್ದೇವೆ. ದೈವಾರಾಧನೆಯ ಗೌರವ ಹಾಗೂ ಅಚಲ ಭಕ್ತಿಯನ್ನು ಉಳಿಸಿಕೊಳ್ಳುವ ಸಲುವಾಗಿ ನಾವು ಶ್ರಮಪಟ್ಟು ಕೆಲಸ ಮಾಡಿದ್ದೇವೆ. ಇದರೊಂದಿಗೆ ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಮಹತ್ವವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾರಿ ಯಶಸ್ವಿಯಾಗಿದ್ದೇವೆ. ಪ್ರೇಕ್ಷಕರಿಂದ ಬಂದಿರುವ ಅಪಾರವಾದ ಪ್ರೀತಿಗೆ ಹಾಗೂ ಪ್ರೋತ್ಸಾಹಕ್ಕೆ ನಾವು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ’.
‘ಆದಾಗ್ಯೂ, ಇತ್ತೀಚೆಗೆ ಕೆಲವು ಜನರು ಚಿತ್ರದಲ್ಲಿ ತೋರಿಸಿದ ದೈವ ಪಾತ್ರಗಳನ್ನು ಅನುಕರಿಸುತ್ತಾ, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಕಾರ್ಯಕ್ರಮಗಳಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಚಿತ್ರಗಳಲ್ಲಿ ತೋರಿಸಲಾದ ದೈವಾರಾಧನೆ ಅಥವಾ ದೈವಪೂಜೆ ಅತ್ಯಂತ ಪವಿತ್ರವಾದ ಆಧ್ಯಾತ್ಮಿಕ ಸಂಪ್ರದಾಯಕ್ಕೆ ಆಧಾರಿತವಾಗಿದೆ. ಇದನ್ನು ಹಾಸ್ಯಾಸ್ಪದವಾಗಿ ಅಣುಕು ಪ್ರದರ್ಶನ ಮಾಡುವಂತಿಲ್ಲ. ಇಂತಹ ಕೃತ್ಯಗಳು ನಮ್ಮ ನಂಬಿಕೆ ಮತ್ತು ಧಾರ್ಮಿಕ ಸಂವೇದನೆಯನ್ನು ಹೀನಗೊಳಿಸುತ್ತವೆ ಮತ್ತು ತುಳುನಾಡಿನ ಜನರ ಭಾವನೆಗಳಿಗೆ ತೀವ್ರ ನೋವುಂಟುಮಾಡುತ್ತವೆ. ಅದುದರಿಂದ ಹೊಂಬಾಳೆ ಫಿಲ್ಮ್ಸ್, ಜನತೆ ಹಾಗೂ ಪ್ರೇಕ್ಷಕರಿಗೆ ಮನವಿ ಮಾಡಿಕೊಳ್ಳುತ್ತದೆ. ದೈವ ಪಾತ್ರಗಳನ್ನು ಅನುಕರಿಸುವುದು, ಧ್ವನಿಯನ್ನು ಹೋಲುವುದು ಅಥವಾ ಅವರ ರೂಪ-ವೇಷಧಾರಣೆ ಮಾಡುವುದು ಸೇರಿದಂತೆ ಯಾವುದೇ ರೀತಿಯ ಕೃತ್ಯಗಳಿಂದ ದೂರವಿರಿ. ಇದನ್ನು ಚಿತ್ರಮಂದಿರಗಳಲ್ಲಿ ಆಗಲಿ, ಸಾರ್ವಜನಿಕ ಸ್ಥಳಗಳಲ್ಲಿ ಅಗಲಿ ಎಲ್ಲೂ ಮಾಡುವಂತಿಲ್ಲ. ದೈವಾರಾಧನೆಯ ಪವಿತ್ರತೆಯನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’.
‘ಈ ಆರಾಧನೆಯ ಆಧ್ಯಾತ್ಮಿಕ ಮಹತ್ವವನ್ನು ಎಲ್ಲರೂ ಗುರುತಿಸಿ, ಗೌರವದಿಂದ ನಡೆದುಕೊಳ್ಳಬೇಕು. ನಮ್ಮ ಚಿತ್ರಗಳ ಮೂಲಕ ನಾವು ಸಂಭ್ರಮಿಸಿದ ಈ ನಂಬಿಕೆಯನ್ನು ಯಾವುದೇ ಸಂದರ್ಭದಲ್ಲಿ ಹಾಸ್ಯಾಸ್ಪದವಾಗಲು ಅವಕಾಶ ನೀಡಬಾರದು. ಈ ಅಮೂಲ್ಯ ಸಾಂಸ್ಕೃತಿಕ ಪರಂಪರೆಯ ಪವಿತ್ರತೆಯನ್ನು ಕಾಪಾಡಲು ನೀವು ನೀಡುತ್ತಿರುವ ನಿರಂತರ ಪ್ರೋತ್ಸಾಹ ಮತ್ತು ಸಹಕಾರಕ್ಕೆ ನಮ್ಮ ಹೃತ್ಪೂರ್ವಕ ಧನ್ಯವಾದಗಳು’ ಎಂದು ಬರೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.