
ಬೆಂಗಳೂರು: ನಟ ‘ದುನಿಯಾ’ ವಿಜಯ್ ನಟನೆಯ, ಜಡೇಶ್ ಕೆ.ಹಂಪಿ ನಿರ್ದೇಶನದ ‘ಲ್ಯಾಂಡ್‌ಲಾರ್ಡ್’ ಸಿನಿಮಾಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ನೀಡಿದೆ.
ಈ ಕುರಿತು ‘ಎಕ್ಸ್’ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ‘ಲ್ಯಾಂಡ್‌ಲಾರ್ಡ್’ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನಿಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ. ಸಾಮಾಜಿಕ ಕಳಕಳಿಯ ಸಿನಿಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಸರ್ಕಾರವಾಗಿ ನಮ್ಮ ನೈತಿಕ ಹೊಣೆ. ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ‘ಲ್ಯಾಂಡ್‌ಲಾರ್ಡ್’ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಫೂರ್ತಿಯಾಗಲಿದೆ ಎಂದು ನಂಬಿದ್ದೇನೆ’ ಎಂದು ಉಲ್ಲೇಖಿಸಿದ್ದಾರೆ.
ಕೃತಜ್ಞತೆ ಸಲ್ಲಿಸಿದ ವಿಜಯ್: ಸರ್ಕಾರದ ನಿರ್ಧಾರಕ್ಕೆ ಪ್ರತಿಕ್ರಿಯೆ ನೀಡಿರುವ ‘ದುನಿಯಾ’ ವಿಜಯ್, ‘ಸರ್ಕಾರದ ಈ ನಡೆ ತಳಸಮುದಾಯಗಳ ಹಕ್ಕು ಮತ್ತು ಹೋರಾಟಗಳ ಕುರಿತು ಇನ್ನಷ್ಟು ಅರ್ಥಪೂರ್ಣ ಚಿತ್ರಗಳನ್ನು ಮಾಡಲು ನಮಗೆ ಹೊಸ ಹುರುಪು ನೀಡಿದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.