
ಸಿಎಂ ಸಿದ್ದರಾಮಯ್ಯ, ದುನಿಯಾ ವಿಜಯ್
ದುನಿಯಾ ವಿಜಯ್ ನಟನೆಯ ‘ಲ್ಯಾಂಡ್‌ಲಾರ್ಡ್’ ಸಿನಿಮಾ ಜನವರಿ 23ರಂದು ಬಿಡುಗಡೆಯಾಗಿತ್ತು. ಸಿನಿಮಾ ನೋಡಿದ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಲಾಂಡ್‌ಲ್ಯಾಂಡ್ ಸಿನಿಮಾ ವೀಕ್ಷಿಸುವುದಾಗಿ ಹೇಳಿದ್ದರು. ಆ ಬೆನ್ನಲ್ಲೆ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಸೂಚನೆ ನೀಡಿದ್ದಾರೆ. ಇದರಿಂದ ಚಿತ್ರತಂಡಕ್ಕೆ ಮತ್ತಷ್ಟು ಬೆಂಬಲ ಸಿಕ್ಕಂತಾಗಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ‘ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ ‘ಲ್ಯಾಂಡ್ ಲಾರ್ಡ್’ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದಿದ್ದಾರೆ.
‘ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನಿಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ. ಸಾಮಾಜಿಕ ಕಳಕಳಿಯ ಸಿನಿಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ. ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಲ್ಯಾಂಡ್ ಲಾರ್ಡ್ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ನಿರ್ಮಾಪಕರಿಗೆ ಬರುವ ಹಣ ಜಾಸ್ತಿಯಾಗುತ್ತದೆ.
ಸಿಎಂ ಸಿದ್ದರಾಮಯ್ಯ, ದುನಿಯಾ ವಿಜಯ್
ಈ ಹಿಂದೆ ದುನಿಯಾ ವಿಜಯ್ ಹಾಗೂ ಜಡೇಶ್ ಕುಮಾರ್ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ತೆರಿಗೆ ವಿನಾಯಿತಿ ಕೊಡುವಂತೆ ಮನವಿ ಮಾಡಿದ್ದರು. ಆ ವೇಳೆ ಸಿನಿಮಾ ನೋಡದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಈಗ ಸಂಬಂಧಪಟ್ಟ ಅಧಿಕಾರಿಗಳಿಗೆ ತೆರಿಗೆ ವಿನಾಯಿತಿ ನೀಡಲು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಜಡೇಶ್ ಕುಮಾರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಸಿನಿಮಾದಲ್ಲಿ ದುನಿಯಾ ವಿಜಯ್, ರಚಿತಾ ರಾಮ್, ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಶೇಷ ಏನೆಂದರೆ ಇದೇ ಸಿನಿಮಾದ ಮೂಲಕ ದುನಿಯಾ ವಿಜಯ್ ಮಗಳು ರಿತನ್ಯ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.