ADVERTISEMENT

ಮಲಯಾಳಂ ಖ್ಯಾತ ನಟ ಮೋಹನ್‌ ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಪಿಟಿಐ
Published 20 ಸೆಪ್ಟೆಂಬರ್ 2025, 13:47 IST
Last Updated 20 ಸೆಪ್ಟೆಂಬರ್ 2025, 13:47 IST
ಮೋಹನ್‌ಲಾಲ್‌
ಮೋಹನ್‌ಲಾಲ್‌   

ನವದೆಹಲಿ: ಮಲಯಾಳ ಚಿತ್ರರಂಗದ ಹಿರಿಯ ನಟ ಮೋಹನ್‌ಲಾಲ್‌ ಅವರನ್ನು ಭಾರತೀಯ ಸಿನಿಮಾ ಕ್ಷೇತ್ರದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ.

ಸಿನಿಮಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಭಾರತೀಯ ಸಿನಿಮಾದ ಪಿತಾಮಹ ದಾದಾಸಾಹೇಬ್‌ ಫಾಲ್ಕೆ ಹೆಸರಿನಲ್ಲಿ ಈ ಪ್ರಶಸ್ತಿ ಸ್ಥಾಪಿಸಲಾಗಿದೆ.

2023ನೇ ಸಾಲಿನ ಪ್ರಶಸ್ತಿಗೆ 65 ವರ್ಷದ ಮೋಹನ್‌ಲಾಲ್‌ ಅವರನ್ನು ಆಯ್ಕೆ ಮಾಡಿರುವ ವಿಷಯವನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್‌ ಶನಿವಾರ ‘ಎಕ್ಸ್‌’ನಲ್ಲಿ ಪ್ರಕಟಿಸಿದ್ದಾರೆ. ಸೆಪ್ಟೆಂಬರ್‌ 23ರಂದು ನಡೆಯಲಿರುವ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ADVERTISEMENT

‘ಸಿನಿಮಾ ಕ್ಷೇತ್ರದಲ್ಲಿ ಮೋಹನ್‌ಲಾಲ್ ಅವರ ಅಸಾಧಾರಣ ಪ್ರಯಾಣವು ಹಲವು ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತದೆ’ ಎಂದು ಸಚಿವಾಲಯ ತಿಳಿಸಿದೆ.

ಪ್ರಧಾನಿ ಅಭಿನಂದನೆ: ‘ಸಿನಿಮಾ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಮೋಹನ್‌ಲಾಲ್‌ ಅವರ ಪ್ರತಿಭೆ ನಿಜಕ್ಕೂ ಸ್ಪೂರ್ತಿದಾಯಕವಾಗಿದೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರ ಸಾಧನೆಗಳು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಲಿ’ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ಧಾರೆ.

ಮೋಹನ್‌ಲಾಲ್‌ ಅವರಿಗೆ 2001ರಲ್ಲಿ ಪದ್ಮಶ್ರೀ ಮತ್ತು 2019ರಲ್ಲಿ ಪದ್ಮಭೂಷಣ ಪುರಸ್ಕಾರ ಲಭಿಸಿದ್ದವು.

‘ಮೋಹನ್ ಲಾಲ್ ಅವರ ಸಿನಿ ಪ್ರಯಾಣವು ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತದೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ನಟ, ನಿರ್ದೇಶಕ ಮತ್ತು ನಿರ್ಮಾಪಕರನ್ನು ಗೌರವಿಸಲಾಗುತ್ತಿದೆ’ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದೆ.

350ಕ್ಕೂ ಹೆಚ್ಚು ಸಿನಿಮಾ ನಾಲ್ಕು ದಶಕಗಳಿಗೂ ಹೆಚ್ಚಿನ ವೃತ್ತಿಜೀವನದಲ್ಲಿ ಮೋಹನ್‌ಲಾಲ್‌ ಅವರು ಮಲಯಾ‌ಳ ತಮಿಳು ತೆಲುಗು ಹಿಂದಿ ಮತ್ತು ಕನ್ನಡ ಭಾಷೆಗಳ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ತನ್ಮಾತ್ರ ಇರುವರ್ ದೃಶ್ಯಂ ವಾನಪ್ರಸ್ಥಂ ಕಂಪನಿ ಮುಂದಿರಿವಳ್ಳಿಗಳ್ ತಳಿರ್ಕುಂಬೋಳ್ ಮತ್ತು ಪುಲಿಮುರುಗನ್ ಅವರಿಗೆ ಹೆಸರು ತಂದುಕೊಟ್ಟ ಪ್ರಮುಖ ಚಿತ್ರಗಳಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.