ಪಿಆರ್‌ಕೆ ಪ್ರೊಡಕ್ಷನ್ಸ್‌ನಡಿ, ‘ವೈಲ್ಡ್ ಕರ್ನಾಟಕ’ ಖ್ಯಾತಿಯ ಅಮೋಘವರ್ಷ ಜೆ.ಎಸ್. ಅವರ ಜೊತೆಗೂಡಿ ನಟ ದಿವಂಗತ ಪುನೀತ್ ರಾಜ್‌ಕುಮಾರ್ ತಯಾರಿಸಿದ್ದ ಡಾಕ್ಯೂಫಿಲಂ ‘ಗಂಧದಗುಡಿ’ಯನ್ನು ‘ಅದ್ಭುತ ಕಲಾಕೃತಿ, ದೃಶ್ಯಕಾವ್ಯ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದ್ದಾರೆ.
ಡಾಕ್ಯೂಫಿಲಂ ಟೈಟಲ್ ಟೀಸರ್ ಬಿಡುಗಡೆ ಬೆನ್ನಲ್ಲೇ ಟ್ವೀಟ್ ಮಾಡಿರುವ ಅವರು, ‘ನಮ್ಮೆಲ್ಲರ ಪ್ರೀತಿಯ ಅಪ್ಪು ದಿವಂಗತ ಪುನೀತ್ ರಾಜಕುಮಾರ್ ಅಭಿನಯದ ‘ಗಂಧದ ಗುಡಿ’ ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ, ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ. ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು. ಪ್ರತಿ ಭಾರತೀಯ, ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಕನ್ನಡಿಗ ಕರುನಾಡಿನ ಈ ಕಥಾನಕವನ್ನು ನೋಡುವಂತಾಗಲಿ. ನಮ್ಮ ಅರಣ್ಯ, ನಮ್ಮ ಪರಿಸರ, ವೈವಿಧ್ಯಮಯ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರ ಪ್ರೇರಣೆ ನೀಡಲಿ’ ಎಂದಿದ್ದಾರೆ.
ಮುಖ್ಯಮಂತ್ರಿ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿರುವ ಅಶ್ವಿನಿ ಪುನೀತ್ ರಾಜ್‌ಕುಮಾರ್, ‘ಈ ಗಂಧದಗುಡಿಯನ್ನು ನಾಡಿನ ಪ್ರತಿಯೊಬ್ಬರಿಗೂ ತಲುಪಿಸಬೇಕಾದ ಜವಾಬ್ದಾರಿ ನಮ್ಮೆಲ್ಲರದು. ಈ ನಿಟ್ಟಿನಲ್ಲಿ ನೀವು ನೀಡುತ್ತಿರುವ ಸಹಕಾರ ಮತ್ತು ಪ್ರೋತ್ಸಾಹಕ್ಕೆ ನಾವು ಸದಾ ಆಭಾರಿ’ ಎಂದಿದ್ದಾರೆ.
ಕಳೆದ ನವೆಂಬರ್ 1ರಂದು ಈ ಟೈಟಲ್ ಟೀಸರ್ ಅನ್ನು ಸ್ವತಃ ಬಸವರಾಜ ಬೊಮ್ಮಾಯಿಯವರೇ ಅನಾವರಣಗೊಳಿಸಬೇಕಿತ್ತು. ಈ ಕಾರ್ಯಕ್ರಮಕ್ಕೆ ಆಹ್ವಾನಿಸಲು ಪುನೀತ್ ಅವರೇ ಬೊಮ್ಮಾಯಿ ಅವರಿಗೆ ಅ.28ರಂದು ಕರೆ ಮಾಡಿ ಸಮಯ ಕೇಳಿದ್ದರು. ಅ.29ಕ್ಕೆ ಭೇಟಿಗೆ ಸಮಯವನ್ನು ನೀಡಲಾಗಿತ್ತು. ಆದರೆ ಅದೇ ದಿನ ಬೆಳಗ್ಗೆ ಪುನೀತ್ ಹೃದಯ ಸ್ತಂಭನದಿಂದ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.