ನಟ ಅಲ್ಲು ಅರ್ಜುನ್
ಹೈದರಾಬಾದ್: ಇತ್ತೀಚೆಗೆ ‘ಪುಷ್ಪ 2‘ ಚಿತ್ರದ ಪ್ರೀಮಿಯರ್ ಶೋ ವೇಳೆ ನೂಕುನುಗ್ಗಲು ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಆಕೆಯ 9 ವರ್ಷದ ಮಗನ ಸ್ಥಿತಿ ಗಂಭೀರವಾಗಿರುವ ಕುರಿತು ನಟ ಅರ್ಜುನ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ದುರದೃಷ್ಟಕರ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೇಜ್ ಅವರ ಆರೋಗ್ಯದ ಸ್ಥಿತಿ ಬಗ್ಗೆ ತೀವ್ರ ಕಳವಳವಿದೆ. ಬಾಲಕನ ಚಿಕಿತ್ಸೆ ಸೇರಿದಂತೆ ಕುಟುಂಬದ ಅಗತ್ಯಗಳನ್ನು ನಿಭಾಯಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ' ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
'ಈ ಕಷ್ಟದ ಸಮಯದಲ್ಲಿ ಬಾಲಕನ ಆರೋಗ್ಯದಲ್ಲಿ ಶೀಘ್ರ ಚೇತರಿಕೆ ಕಾಣಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಳ್ಳುವೆ. ಕಾನೂನು ಪ್ರಕ್ರಿಯೆ ನಡೆಯುತ್ತಿರುವುದರಿಂದ ಬಾಲಕ ಹಾಗೂ ಆತನ ಕುಟುಂಬವನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ' ಎಂದೂ ಬೇಸರ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್‌ನಲ್ಲಿ ಡಿ.4ರಂದು ಪುಷ್ಪ–2 ಪ್ರೀಮಿಯರ್ ಪ್ರದರ್ಶನದ ವೇಳೆ 35 ವರ್ಷದ ಮಹಿಳೆ ಮೃತಪಟ್ಟಿದ್ದು, ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದ. ಹೈದರಾಬಾದ್‌ನಲ್ಲಿರುವ ಸಂಧ್ಯಾ ಚಿತ್ರಮಂದಿರದಲ್ಲಿ ಘಟನೆ ನಡೆದಿತ್ತು. ಈ ಸಂಬಂಧ ಮೃತ ಮಹಿಳೆಯ ಕುಟುಂಬ ಸದಸ್ಯರು ಡಿ.5 ರಂದು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು.
ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಡಿಸೆಂಬರ್ 13ರಂದು ಬಂಧಿಸಿದ್ದರು. ಹಲವು ಬೆಳವಣಿಗೆಗಳ ನಂತರ ಅಂದೇ ಮಧ್ಯಂತರ ಜಾಮೀನು ಪಡೆದುಕೊಂಡು, ಶನಿವಾರ ಜೈಲಿನಿಂದ ಬಿಡುಗಡೆಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.