ನಟಿ ರಮ್ಯ, ಆರೋಪಿಗಳಾದ ರಾಜೇಶ್, ಭುವನ್, ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್
ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪದಡಿ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಭುವನ್‌ಗೌಡ ಹಾಗೂ ರಾಜೇಶ್ ಬಂಧಿತರು.
ಇದೇ ಪ್ರಕರಣದಲ್ಲಿ ಆಗಸ್ಟ್ 2ರಂದು ಟಿ.ಓಬಣ್ಣ ಹಾಗೂ ಗಂಗಾಧರ ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.
‘ಇನ್‌ಸ್ಟಾಗ್ರಾಂನ 47 ಖಾತೆಗಳಿಂದ ಆರೋಪಿಗಳು ರಮ್ಯಾ ಅವರಿಗೆ ಅಶ್ಲೀಲ ಹಾಗೂ ಬೆದರಿಕೆ ಸಂದೇಶ ಕಳುಹಿಸಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ. ಆ ಖಾತೆಗಳ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ನಗರ ಪೊಲೀಸ್ ಕಮಿಷನರ್ ಸೀಮಂತ್‌ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾಹಿತಿ ನೀಡಿದರು.
‘ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿರುವ ಖಾತೆದಾರರಿಗೆ ಹುಡುಕಾಟ ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.
ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ರಮ್ಯಾ ಅವರು ಜುಲೈ 28ರಂದು ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು. ಆ ದೂರು ಆಧರಿಸಿ ಸೈಬರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದ್ದು ಸಿಸಿಬಿ ಪೊಲೀಸರು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರೆ ಆರು ಆರೋಪಿಗಳಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಕ್ರಮಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿತ್ತು. ಜಾಮೀನಿನ ಮೇಲಿನ ಆದೇಶ ಕಾಯ್ದಿರಿಸಿದೆ. ಇದಾದ ಮೇಲೆ ರಮ್ಯಾ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿ ‘ಭಾರತದ ಸಾಮಾನ್ಯ ಜನರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಕಿರಣ ಇದ್ದಂತೆ. ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿ’ ಎಂದು ಅದರಲ್ಲಿ ಉಲ್ಲೇಖಿಸಿದ್ದರು.
ರಮ್ಯಾ ಅವರು ಈ ಪೋಸ್ಟ್ ಹಾಕಿದ ಬಳಿಕ ಅವರ ಇನ್‌ಸ್ಟಾಗ್ರಾಂ ಖಾತೆಗಳಿಗೆ ಅವಹೇಳನಕಾರಿ ಸಂದೇಶಗಳು ಬಂದಿದ್ದವು. ಸಂದೇಶಗಳ ಸ್ಕ್ರೀನ್‌ಶಾಟ್ ಅನ್ನು ರಮ್ಯಾ ತೆಗೆದುಕೊಂಡು ಪೊಲೀಸರಿಗೆ ದೂರು ನೀಡಿದ್ದರು.
‘ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ, ದ್ವೇಷಭಾಷಣ ಹಾಗೂ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಈ ರೀತಿ ಬೆದರಿಕೆ ಪ್ರಕರಣಗಳನ್ನು ಭಾರತೀಯ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಅಡಿಯಲ್ಲಿ ಅಪರಾಧಗಳೆಂದು ಪರಿಗಣಿಸಲಾಗಿದೆ’ ಎಂದು ಕಮಿಷನರ್ ಹೇಳಿದರು.
ಸಾಮಾಜಿಕ ಮಾಧ್ಯಮಗಳ ಬಳಕೆದಾರರು ತಮ್ಮ ಅಭಿಪ್ರಾಯ ಹಂಚಿಕೊಳ್ಳುವಾಗ ಜವಾಬ್ದಾರಿ ಹಾಗೂ ಮಿತಿಯಿಂದ ನಡೆದುಕೊಳ್ಳಬೇಕು
– ಸೀಮಂತ್ ಕುಮಾರ್ ಸಿಂಗ್, ನಗರ ಪೊಲೀಸ್ ಕಮಿಷನರ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.