
ರಣ್‌ವೀರ್ ಸಿಂಗ್, ರಿಷಬ್ ಶೆಟ್ಟಿ
ಚಿತ್ರ: ಇನ್‌ಸ್ಟಾಗ್ರಾಂ
ಕಾಂತಾರ ಅಧ್ಯಾಯ–1ರ ಕ್ಲೈಮ್ಯಾಕ್ಸ್‌ನಲ್ಲಿ ನಟ ರಿಷಬ್ ನಟಿಸಿದ್ದ ಚಾವುಂಡಿ ದೈವದ ಪಾತ್ರಕ್ಕೆ ಬಾಲಿವುಡ್ ನಟ ರಣ್‌ವೀರ್ ಸಿಂಗ್ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೆ ಅವರು ಕ್ಷಮೆಯಾಚಿಸಿದ್ದಾರೆ.
ರಣ್‌ವೀರ್ ಸಿಂಗ್ ಅವರ ನಡೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆ ಬೆನ್ನಲ್ಲೆ ರಣ್‌ವೀರ್ ಸಿಂಗ್ ಅವರು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ‘ನಾನು ಯಾರದ್ದಾದರೂ ಭಾವನೆಗಳಿಗೆ ನೋವುಂಟು ಮಾಡಿದ್ದರೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ರಣ್‌ವೀರ್ ಸಿಂಗ್ ಕ್ಷಮೆ ಕೇಳಿದ ಪೋಸ್ಟ್
ರಣ್‌ವೀರ್ ಸಿಂಗ್ ಹಂಚಿಕೊಂಡ ಪೋಸ್ಟ್‌ನಲ್ಲಿ ಏನಿದೆ?
‘ಕಾಂತಾರಾ ಅಧ್ಯಾಯ 1 ಚಿತ್ರದಲ್ಲಿ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಮುಖ್ಯ ಉದ್ದೇಶವಾಗಿತ್ತು. ಆ ದೃಶ್ಯವನ್ನು ಮಾಡಲು ಎಷ್ಟು ಶ್ರಮ ಬೇಕು ಎಂಬುದು ನನಗೆ ತಿಳಿದಿದೆ. ಹೀಗಾಗಿ ಅವರ ಬಗ್ಗೆ ನನಗೆ ಹೆಮ್ಮೆ ಇದೆ. ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಮತ್ತು ನಂಬಿಕೆಯನ್ನು ನಾನು ಯಾವಾಗಲೂ ಆಳವಾಗಿ ಗೌರವಿಸುತ್ತೇನೆ. ನಾನು ಯಾರದ್ದಾದರೂ ಭಾವನೆಗಳಿಗೆ ನೋವುಂಟು ಮಾಡಿದ್ದರೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ’ ಎಂದು ರಣ್‌ವೀರ್ ಸಿಂಗ್ ಬರೆದುಕೊಂಡಿದ್ದಾರೆ.
ಕಾಂತಾರ ಸಿನಿಮಾದ ದೃಶ್ಯವನ್ನು ನಕಲು ಮಾಡಿದ್ದ ನಟ ರಣ್‌ವೀರ್ ಸಿಂಗ್
ಅಸಲಿಗೆ ವೇದಿಕೆ ಮೇಲೆ ಆಗಿದ್ದೇನು?
ಬಾಲಿವುಡ್ ನಟ ರಣ್‌ವೀರ್ ಸಿಂಗ್ ಅವರು ಪಣಜಿಯಲ್ಲಿ ಶುಕ್ರವಾರ (ಆ.28) ನಡೆದ 56ನೇ ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (IFFI–ಇಫಿ) ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿದ್ದರು. ಮುಖ್ಯವಾಗಿ ನಟ ರಣ್‌ವೀರ್ ಸಿಂಗ್ ಅವರು ತಮ್ಮ ‘ಧುರಂಧರ್’ ಸಿನಿಮಾ ರಿಲೀಸ್ ಸಂದರ್ಭದಲ್ಲಿ ವಿವಾದ ಒಂದನ್ನು ಮೈಮೇಲೆ ಎಳೆದುಕೊಂಡಿದ್ದರು.
‘ಕಾಂತಾರ’ ಸಿನಿಮಾ ಹಾಗೂ ರಿಷಬ್ ಶೆಟ್ಟಿಯನ್ನು ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದರು. ಅದೇ ವಿಡಿಯೊದ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ರಣ್‌ವೀರ್ ಸಿಂಗ್ ವಿರುದ್ಧ ಕನ್ನಡಿಗರು ಆಕ್ರೋಶ ಹೊರ ಹಾಕಿದ್ದರು. ಆ ಬೆನ್ನಲ್ಲೆ ರಣ್‌ವೀರ್ ಸಿಂಗ್ ಕ್ಷಮೆ ಕೇಳಿದ್ದಾರೆ. ಈ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.