
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ರಿಷಬ್ ಶೆಟ್ಟಿ
ಚಿತ್ರ:@shetty_rishab
ನಿರ್ದೇಶಕ, ನಟ ರಿಷಬ್ ಶೆಟ್ಟಿಯವರ ಕಾಂತಾರ ಚಾಪ್ಟರ್–1 ಸಿನಿಮಾ ಅಭೂತಪೂರ್ವ ಯಶಸ್ಸು ಕಂಡಿದೆ. ಸಿನಿ ಪ್ರೇಕ್ಷಕರು ಮಾತ್ರವಲ್ಲ ಅನೇಕ ತಾರಾ ನಟ ನಟಿಯರು ಕೂಡ ಸಿನಿಮಾವನ್ನು ಕೊಂಡಾಡಿದ್ದಾರೆ. ಸದ್ಯ ರಿಷಬ್ ಶೆಟ್ಟಿಯವರು ಕಾಂತಾರ ಸಿನಿಮಾ ಯಶಸ್ಸಿನ ಬೆನ್ನಲ್ಲೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ್ದಾರೆ.
ಭೇಟಿಯ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಇದು ಬರೀ ಭೇಟಿಯಲ್ಲ, ನಮ್ಮ ನಾಡಿನ ಹಿರಿಯ ಚೇತನದೊಂದಿಗಿನ ಒಂದು ಸುಂದರ ಸಂವಾದ. ನಾಡಿನ ಅತ್ಯುನ್ನತ ಸ್ಥಾನಕ್ಕೆ ಏರಿ, ಕನ್ನಡಿಗರ ಕೀರ್ತಿಯನ್ನು ಹೆಚ್ಚಿಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಆಶೀರ್ವಾದ ಪಡೆದ ಕ್ಷಣಗಳು. ಅವರ ಅನುಭವದ ಮಾತುಗಳು ಮತ್ತು ಪ್ರೀತಿಯ ತಲೆದಡವು, ನನಗೆ ಮತ್ತಷ್ಟು ಶಕ್ತಿ ತುಂಬಿದೆ. ಈ ಪ್ರೀತಿ, ಆಶೀರ್ವಾದ ಸದಾ ಇರಲಿ’ ಎಂದು ಬರೆದುಕೊಂಡಿದ್ದಾರೆ.
ವಿಶ್ರಾಂತಿ ಪಡೆಯುತ್ತಿರುವ ಎಚ್‌ಡಿಡಿ
ಕಳೆದ ವಾರ ಅನಾರೋಗ್ಯಕ್ಕೆ ಒಳಗಾಗಿದ್ದ ಎಚ್.ಡಿ. ದೇವೇಗೌಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ಬಳಿಕ ಅವರನ್ನು ಡಿಸ್ಚಾರ್ಜ್ ಮಾಡಲಾಗಿದ್ದು, ಸದ್ಯ ಮನೆಯಲ್ಲೆ ಇದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.