ADVERTISEMENT

ಅಪ್ಪು ನೆನಪು: ಇದು ಕೇವಲ ನಷ್ಟವಲ್ಲ, ದಿಢೀರ್ ಆಘಾತ ಎಂದ ಕಿಚ್ಚ ಸುದೀಪ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಅಕ್ಟೋಬರ್ 2021, 7:40 IST
Last Updated 31 ಅಕ್ಟೋಬರ್ 2021, 7:40 IST
ಕಿಚ್ಚ ಸುದೀಪ್​ ಮತ್ತು ಪುನೀತ್​ ರಾಜ್​ಕುಮಾರ್​
ಕಿಚ್ಚ ಸುದೀಪ್​ ಮತ್ತು ಪುನೀತ್​ ರಾಜ್​ಕುಮಾರ್​   

ಬೆಂಗಳೂರು: ನಟ ಪುನೀತ್​ ರಾಜ್​ಕುಮಾರ್​ ನಿಧನದಿಂದ ಇಡೀ ಭಾರತ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಕಿಚ್ಚ ಸುದೀಪ್​ ಮತ್ತು ಪುನೀತ್​ ರಾಜ್​ಕುಮಾರ್​ ಅವರ ನಡುವೆ ಒಳ್ಳೆಯ ಬಾಂಧವ್ಯವಿತ್ತು. ಈ ಬಗ್ಗೆ ಸುದೀಪ್​ ತಮ್ಮ ಬರಹದ ಮೂಲಕ ವಿವರಿಸಿದ್ದಾರೆ.

ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಪುನೀತ್‌ ರಾಜ್‌ಕುಮಾರ್ ಇನ್ನಿಲ್ಲ ಎಂಬುದನ್ನು ಅರಗಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ. ಇದು ಕೇವಲ ನಷ್ಟವಲ್ಲ, ದಿಢೀರ್ ಆಘಾತವಾಗಿದೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮತ್ತು ಇಡೀ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಸಹಜ ಸ್ಥಿತಿಗೆ ಬರುವುದಕ್ಕೆ ಬಹಳ ಸಮಯ ಬೇಕಾಗುತ್ತದೆ’ ಎಂದು ಹೇಳಿದ್ದಾರೆ.

‘ನಾಡಿನ ನೆಚ್ಚಿನ ನಟನನ್ನು ಅತ್ಯಂತ ಗೌರವಪೂರ್ವಕವಾಗಿ ಬೀಳ್ಕೊಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕಳೆದ ಮೂರು ದಿನ ಎಲ್ಲವನ್ನೂ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿತ್ತು. ಇದಕ್ಕೆ ಸಹಕರಿಸಿದ ಪೊಲೀಸ್ ಇಲಾಖೆ, ಅಧಿಕಾರಿಗಳು ಮತ್ತು ಅಭಿಮಾನಿಗಳು ಎಲ್ಲರೂ ಅಭಿನಂದನಾರ್ಹರು’ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಅ.29ರಂದು (ಶುಕ್ರವಾರ) ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಪುನೀತ್‌ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್‌ಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಹೃದಯಾಘಾತಕ್ಕೆ ಒಳಗಾಗಿದ್ದ ಪುನೀತ್‌ರನ್ನು ತಕ್ಷಣವೇ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾದರು.

ಎರಡು ದಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್‌ ರಾಜ್‌ಕುಮಾರ್‌ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಭಾರತೀಯ ಚಿತ್ರರಂಗದ ಗಣ್ಯರು, ರಾಜಕಾರಣಿಗಳು ಸೇರಿದಂತೆ ಅನೇಕ ಅಭಿಮಾನಿಗಳು ಪಾರ್ಥಿವ ಶರೀರದ ದರ್ಶನ ಪಡೆದರು. ಇಂದು ಬೆಳಿಗ್ಗೆ ಕಂಠೀರವ ಸ್ಟುಡಿಯೊದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.