ನಟ ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ ನೀಡಿದರು.
ಪಿಟಿಐ
ಹೈದರಾಬಾದ್: ಇತ್ತೀಚೆಗೆ ಪುಷ್ಪ–2 ಪ್ರದರ್ಶನದ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನನ್ನು ನಟ ಅಲ್ಲು ಅರ್ಜುನ್ ಮಂಗಳವಾರ ಭೇಟಿ ಮಾಡಿದ್ದಾರೆ.
ಜನವರಿ 5ರಂದು ಅಲ್ಲು ಅರ್ಜುನ್ ಬಾಲಕನನ್ನು ಭೇಟಿ ಮಾಡಬೇಕಿತ್ತು, ಆದರೆ ಕಾರಣಾಂತರಗಳಿಂದ ಭೇಟಿ ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.
ಅಲ್ಲು ಅರ್ಜುನ್ ಅವರು ಇಂದು ಬಾಲಕನನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲು ಜತೆ ತೆಲಂಗಾಣ ರಾಜ್ಯ ಚಲನಚಿತ್ರ ಅಭಿವೃದ್ಧಿ ನಿಗಮ (ಎಫ್‌ಡಿಸಿ) ಅಧ್ಯಕ್ಷ ದಿಲ್ ರಾಜು ಇದ್ದರು.
ನಟ ಭೇಟಿ ಹಿನ್ನೆಲೆ ಆಸ್ಪತ್ರೆಯ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ನಟ ಭೇಟಿ ನೀಡುವ ಸುದ್ದಿಯನ್ನು ಗೌಪ್ಯವಾಗಿ ಇಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪುಷ್ಪ–2 ಪ್ರದರ್ಶನದ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ರೇವತಿ ಕುಟುಂಬಕ್ಕೆ ಚಿತ್ರದ ನಾಯಕ ನಟ ಅಲ್ಲು ಅರ್ಜುನ್, ನಿರ್ಮಾಣ ಸಂಸ್ಥೆ ಮತ್ತು ನಿರ್ದೇಶಕರು ಒಟ್ಟು ₹2 ಕೋಟಿ ಪರಿಹಾರ ನೀಡಿದ್ದಾರೆ.
ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ 'ಪುಷ್ಪ 2' ಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 35 ವರ್ಷದ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದರು. ಅವರ ಎಂಟು ವರ್ಷದ ಮಗ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಘಟನೆಯ ನಂತರ, ಮೃತ ಮಹಿಳೆಯ ಕುಟುಂಬದ ದೂರಿನ ಆಧಾರದ ಮೇಲೆ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಥಿಯೇಟರ್ ಆಡಳಿತದ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಡಿಸೆಂಬರ್ 13ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ತೆಲಂಗಾಣ ಹೈಕೋರ್ಟ್ ಅದೇ ದಿನ ಅವರಿಗೆ ನಾಲ್ಕು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಡಿಸೆಂಬರ್ 14 ರಂದು ಬೆಳಿಗ್ಗೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.