
ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಚಿತ್ರ ಫೆ.27ರಂದು ತೆರೆಗೆ ಬರಲಿದೆ. ತುಳುನಾಡಿನ ಕಂಬಳದ ಕುರಿತಾದ ಕಥೆ ಹೊಂದಿರುವ ಚಿತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಟಿಸಿದ್ದಾರೆ.
‘ತುಳುನಾಡಿನ ಖಾಸಗಿ ಮನೋರಂಜನೆ ಕ್ರೀಡೆಯಾಗಿದ್ದ ಕಂಬಳವನ್ನು ಎಪ್ಪತ್ತರ ದಶಕದಲ್ಲಿ ದೊಡ್ಡ ಮಟ್ಟದಲ್ಲಿ ಆಯೋಜಿಸಿದ್ದವರು ವೀರೇಂದ್ರ ಹೆಗ್ಗಡೆ. ಆ ನಂತರ ಅದು ಬೇರೆ ಬೇರೆ ರೂಪಗಳಲ್ಲಿ ರೂಪಾಂತರ ಹೊಂದಿ ಇಡೀ ಕರುನಾಡನ್ನೇ ಸೆಳೆದುಕೊಂಡಿತು. ಈ ಕಾರಣದಿಂದಲೇ ವೀರೇಂದ್ರ ಹೆಗ್ಗಡೆಯವರನ್ನು ಚಿತ್ರದಲ್ಲಿ ನಟಿಸುವಂತೆ ಕೇಳಿಕೊಂಡೆವು. ಮೌಲಿಕ ಸಂದೇಶವೊಂದನ್ನು ರವಾನಿಸುವ ಪಾತ್ರಕ್ಕೆ ಅವರು ಜೀವ ತುಂಬಿದ್ದಾರೆ’ ಎನ್ನುತ್ತಾರೆ ರಾಜೇಂದ್ರ ಸಿಂಗ್ ಬಾಬು.
‘ಡೆಡ್ಲಿ ಸೋಮ’ ಖ್ಯಾತಿಯ ಆದಿತ್ಯ ನಾಯಕನಾಗಿ ನಟಿಸಿದ್ದಾರೆ. ವಿಜಯ್‌ಕುಮಾರ್ ಕೊಡಿಯಾಲ್ ಬೈಲ್ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ವಿನಿತ ವಿಜಯ್ ಕುಮಾರ್ ರೆಡ್ಡಿ ಹಾಗೂ ಅರುಣ್ ರೈ ತೊಡಾರ್ ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರಾಜ್, ರವಿಶಂಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರೆ, ರಾಧಿಕಾ ಚೇತನ್ ವಿಶೇಷ ಪಾತ್ರಕ್ಕೆ ಜೀವ ತುಂಬಿದ್ದಾರೆ. ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಸೇರಿದಂತೆ ತುಳು ರಂಗಭೂಮಿ ಹಿನ್ನೆಲೆಯ ಪ್ರಸಿದ್ಧ ನಟರು ನಟಿಸಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಆರ್.ಗಿರಿ ಛಾಯಾಚಿತ್ರಗ್ರಹಣ, ಶ್ರೀನಿವಾಸ್ ಎಸ್. ಬಾಬು ಸಂಕಲನ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.