ನಟ ಬ್ಯಾಂಕ್ ಜನಾರ್ದನ್
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ದನ್ ನಿಧನರಾಗಿದ್ದಾರೆ. ಜನಾರ್ದನ್ ಅವರ ನಿಧನಕ್ಕೆ ನಟ ಉಪೇಂದ್ರ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ನಟ ಉಪೇಂದ್ರ, ‘ತರ್ಲೆನನ್ ಮಗ’, ‘ಶ್’ ಚಿತ್ರಗಳಲ್ಲಿ ತಮ್ಮ ಅದ್ಭುತ ಅಭಿನಯದಿಂದ ನನ್ನ ಸಿನಿ ಪಯಣದಲ್ಲಿ ಯಶಸ್ವಿ ಹೆಜ್ಜೆ ಇಡಲು ಕಾರಣಕರ್ತರಾದ ಸರಳ, ಸ್ನೇಹ ಜೀವಿ, ಅಪರೂಪದ ಕಲಾವಿದ ಬ್ಯಾಂಕ್ ಜನಾರ್ಧನ್ ಬೇರೆ ಪಾತ್ರಕ್ಕೆ ಸಜ್ಜಾಗಿ ಬರಲು ವಿಧಿವಶರಾಗ್ಗಿದ್ದಾರೆ. ಬೇಗ ಬನ್ನಿ ಸಾರ್ ಎಂದು ದುಃಖ ವ್ಯಕ್ತಪಡಿಸಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟರು, ಸುಮಾರು ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅನೇಕ ವೈವಿದ್ಯಮಯ ಪಾತ್ರಗಳಲ್ಲಿ ನಟಿಸಿದ್ಧ ಬ್ಯಾಂಕ್ ಜನಾರ್ದನ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ತಮ್ಮ ಅಭಿನಯದಿಂದ ಪ್ರೇಕ್ಷಕರಲ್ಲಿ ಕಚಗುಳಿಯ ಕಡಲನ್ನೇ ಉಕ್ಕಿಸುತ್ತಿದ್ದ ಜನಾರ್ದನ್ ಅವರು, ಪ್ರತಿ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ಆ ಪಾತ್ರದ ಮೂಲಕ ಎಲ್ಲರನ್ನೂ ಸಮ್ಮೋಹನಗೊಳಿಸುತ್ತಿದ್ದರು. ಅವರ ನಿಧನ ನಮ್ಮ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ಬ್ಯಾಂಕ್ ಜನಾರ್ದನ್ ಅವರ ನಿಧನಕ್ಕೆ ಸಂತಾಪ ಕೋರುವೆ. ರಂಗಭೂಮಿಯಲ್ಲಿ ತೊಡಗಿಸಿಕೊಂಡು ನೂರಾರು ಚಲನಚಿತ್ರಗಳು, ಧಾರಾವಾಹಿಗಳಲ್ಲಿ ನಟಿಸಿದ್ದರಲ್ಲದೇ, ಹಾಸ್ಯ ನಟರಾಗಿ ತಮ್ಮದೇ ಆದ ಛಾಪು ಮೂಡಿಸಿ ಕನ್ನಡಿಗರ ಮನೆಮಾತಾಗಿದ್ದ ಅವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ಮೃತರ ಕುಟುಂಬ ವರ್ಗದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಬರೆದುಕೊಂಡಿದ್ದಾರೆ.
ಕನ್ನಡ ಚಿತ್ರರಂಗದ ಹಾಸ್ಯ ಕಲಾವಿದ ಬ್ಯಾಂಕ್ ಜನಾರ್ದನ ಅವರು ನಿಧನ ಹೊಂದಿರುವ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ದುಃಖವಾಗಿದೆ. ಹಾಸ್ಯ ನಟರಾಗಿ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಮನೆಮಾತಾಗಿದ್ದರು. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗ ಒಬ್ಬ ಹಿರಿಯ ಕಲಾವಿದನನ್ನು ಕಳೆದುಕೊಂಡಂತಾಗಿದೆ. ಅವರ ಅಗಲಿಕೆಯ ದುಃಖವನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟರಾದ ಬ್ಯಾಂಕ್ ಜನಾರ್ದನ್ ಅವರು ನಿಧನ ಹೊಂದಿರುವ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ‘ಎಕ್ಸ್‘ನಲ್ಲಿ ಬರೆದುಕೊಂಡಿದ್ದಾರೆ.
ಜನಾರ್ದನ್ ಅವರ ನಿಧನಕ್ಕೆ ಬೇಸರ ವ್ಯಕ್ತಪಡಿಸಿರುವ ಸಚಿರ ರಾಮಲಿಂಗಾ ರೆಡ್ಡಿ, ‘ಹಿರಿಯ ನಟ ಬ್ಯಾಂಕ್ ಜನಾರ್ದನ್ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ಭಾರೀ ನಷ್ಟವಾಗಿದೆ. ಅವರು ಅಭಿನಯಿಸಿದ ಪಾತ್ರಗಳು ಸದಾ ನೆನಪಿನಲ್ಲಿ ಉಳಿಯುತ್ತವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ’ ಎಂದು ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.