ADVERTISEMENT

ಕೆಆರ್‌ಎಸ್‌: ₹1,450 ಕೋಟಿ ವೆಚ್ಚದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 20:16 IST
Last Updated 20 ಜುಲೈ 2021, 20:16 IST
   

ಬೆಂಗಳೂರು: ವಿಶ್ವವಿಖ್ಯಾತ ಕೃಷ್ಣರಾಜ ಸಾಗರ ಜಲಾಶಯದಲ್ಲಿ ₹1,450 ಕೋಟಿ ವೆಚ್ಚದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

ಮಂಗಳವಾರ ನಡೆದ ಪ್ರವಾಸೋದ್ಯಮ ಇಲಾಖೆಯ ಸಭೆಯಲ್ಲಿ ಈ ವಿಷಯ ತಿಳಿಸಿದರು. ಕಾವೇರಿ ನೀರಾವರಿ ನಿಗಮದ ಜತೆ ಸೇರಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು. ಈಗಾಗಲೇ ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದರು.

ಮಂಚನಬೆಲೆಯಲ್ಲಿ ರೆಸಾರ್ಟ್‌

ADVERTISEMENT

ಮಾಗಡಿ ತಾಲ್ಲೂಕು ಮಂಚನಬೆಲೆ ಜಲಾಶಯದ ಸಮೀಪ ಪ್ರವಾಸಿಗರಿಗೆ ವಾಸ್ತವ್ಯ ಕಲ್ಪಿಸಲು ಅರಣ್ಯ, ವಸತಿ ಮತ್ತು ವಿಹಾರಧಾಮ (ಜೆಎಲ್‌ಆರ್‌) ವತಿಯಿಂದ ಸುಸಜ್ಜಿತ ರೆಸಾರ್ಟ್‌ಗಳನ್ನು ನಿರ್ಮಾಣ ಮಾಡುವ ಸಂಬಂಧ ಚರ್ಚೆ ನಡೆಸಲಾಯಿತು.

ಮಂಚನಬೆಲೆ ಜಲಾಶಯ ಪ್ರದೇಶವನ್ನು ಅತ್ಯುತ್ತಮ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಬೇಕು. ಬೆಂಗಳೂರಿಗೆ ಅತ್ಯಂತ ಹತ್ತಿರವಾಗಿರುವ ಈ ಪ್ರವಾಸಿ ತಾಣದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿ, ಪ್ರವಾಸಿ ಸ್ನೇಹಿ ಮಾಡಿದರೆ ಜನ ಸಾಮಾನ್ಯರೂ ಬರುತ್ತಾರೆ ಎಂದು ಹೇಳಿದರು.

ಇಲ್ಲಿ ನಿರ್ಮಾಣ ಮಾಡುವ ಜಂಗಲ್‌ ಲಾಡ್ಜ್‌ ರೆಸಾರ್ಟ್‌ ಪರಿಸರ ಸ್ನೇಹಿಯಾಗಿರಬೇಕು. ಅಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಹಾಗೂ ಜಲಾಶಯಕ್ಕೆ ಯಾವುದೇ ರೀತಿಯ ಧಕ್ಕೆ ಆಗದಂತೆ ಯೋಜನೆಯನ್ನು ಕಾರ್ಯರೂಪಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದಕ್ಕಾಗಿ 10 ಎಕರೆ ಕಂದಾಯ ಜಮೀನನ್ನು ಜಂಗಲ್‌ ಲಾಡ್ಜ್‌ಗೆ ನೀಡುವಂತೆ ರಾಮನಗರ ಜಿಲ್ಲಾಧಿಕಾರಿಯವರಿಗೆ ಸೂಚಿಸಿದರು. ಇನ್ನೆರಡು ದಿನಗಳಲ್ಲಿ ಸ್ಥಳಕ್ಕೆ ತೆರಳಿ ಜಮೀನನ್ನು ವರ್ಗಾಯಿಸುವುದಾಗಿ ಜಿಲ್ಲಾಧಿಕಾರಿ ರಾಕೇಶ್‌ ಕುಮಾರ್‌ ಹೇಳಿದರು. ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.