ಭಾರತ ಮತ್ತು ಕೆನಡಾದ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿರುವುದರ ನಡುವೆಯೇ, ಸಾಮಾಜಿಕ ಜಾಲತಾಣಗಳ ಕೆಲವು ಬಳಕೆದಾರರು, ಕೆನಡಾವು ಭಾರತವನ್ನು ‘ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವ ರಾಷ್ಟ್ರ’ ಎಂದು ಘೋಷಿಸಿದೆ ಎಂದು ಪೋಸ್ಟ್ ಮಾಡುತ್ತಿದ್ದಾರೆ. ಆದರೆ, ಇದು ಸುಳ್ಳು. ಕೆನಡಾ ಅಂತಹ ನಿರ್ಧಾರ ಕೈಗೊಂಡಿಲ್ಲ.
ಗೂಗಲ್‌ನಲ್ಲಿ ನಿರ್ದಿಷ್ಟ ಪದಗಳನ್ನು ಬಳಸಿ ಹುಡುಕಾಟ ನಡೆಸಿದಾಗ, ಈ ವಾದವನ್ನು ದೃಢಪಡಿಸುವಂತಹ ಯಾವುದೇ ಅಧಿಕೃತ ಮಾಹಿತಿ ಸಿಗಲಿಲ್ಲ. ಒಂದು ವೇಳೆ ಅಂತಹ ನಿರ್ಧಾರ ಕೈಗೊಂಡಿದ್ದೇ ಆದರೆ, ಎರಡೂ ರಾಷ್ಟ್ರಗಳಲ್ಲಿ ಇದು ದೊಡ್ಡ ಸುದ್ದಿಯಾಗುತ್ತಿತ್ತು. ಕೆನಡಾ ಸರ್ಕಾರದ ಅಧಿಕೃತ ವೆಬ್‌ಸೈಟ್ ಆದ ಪಬ್ಲಿಕ್ ಸೇಫ್ಟಿ ಕೆನಡಾಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, ಅದರಲ್ಲಿ ಭಯೋತ್ಪಾದಕ ಸಂಘಟನೆಗಳ ಹೆಸರು ಇದ್ದವಾದರೂ ಪಟ್ಟಿಯಲ್ಲಿ ಭಾರತದ ಉಲ್ಲೇಖ ಇರಲಿಲ್ಲ. ಕೆನಡಾ ಪ್ರಧಾನಿ ಮತ್ತು ವಿದೇಶಾಂಗ ಸಚಿವಾಲಯದ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಪರಿಶೀಲಿಸಿದಾಗಲೂ ಈ ಬಗ್ಗೆ ಯಾವುದೇ ಮಾಹಿತಿ ಸಿಗಲಿಲ್ಲ. ಆದರೆ, ಕೆನಡಾವು ಭಾರತವನ್ನು ಸೈಬರ್ ಬೆದರಿಕೆ ಇರುವ ರಾಷ್ಟ್ರಗಳ ಪಟ್ಟಿಯಲ್ಲಿ ಸೇರಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ನವೆಂಬರ್ ಮೊದಲ ವಾರದಲ್ಲಿ ವರದಿಯಾಗಿತ್ತು ಎಂದು ಪಿಟಿಐ ಫ್ಯಾಕ್ಟ್ ಚೆಕ್ ವರದಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.