ADVERTISEMENT

ಅಡ್ವಾಣಿ-ಭಾಗ್ವತ್ ಭೇಟಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2013, 20:08 IST
Last Updated 6 ಸೆಪ್ಟೆಂಬರ್ 2013, 20:08 IST

ನವದೆಹಲಿ (ಪಿಟಿಐ): ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ. ಅಡ್ವಾಣಿ ಹಾಗೂ ಸುಷ್ಮಾ ಸ್ವರಾಜ್ ಗುರುವಾರ ರಾತ್ರಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಅಡ್ವಾಣಿ ಆಯೋಜಿಸಿದ್ದ ಭೋಜನಕೂಟದಲ್ಲಿ ಪಾಲ್ಗೊಂಡ ಮುಖಂಡರು, ಮೋದಿ ಅವರನ್ನು ಈಗಲೇ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕೇ, ಇಲ್ಲವೆ ಕೆಲ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ನಂತರ ಈ ಕುರಿತು ನಿರ್ಧಾರ ಕೈಗೊಳ್ಳಬೇಕೆ ಎಂಬುದರ ಕುರಿತು ಚರ್ಚೆ ನಡೆಸಿದರು.

ಮಧ್ಯಪ್ರದೇಶದಲ್ಲೂ ಶೀಘ್ರ ಚುನಾವಣೆ ನಡೆಯುತ್ತಿರುವುದರಿಂದ ಮೋದಿ ಅವರನ್ನು ಈ ಹಂತದಲ್ಲಿ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದಲ್ಲಿ ಫಲಿತಾಂಶದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿ ಆ ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈಚೆಗೆ ಪಕ್ಷದ ಮುಖಂಡರಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಡ್ವಾಣಿ-ಭಾಗವತ್ ಭೇಟಿ ಮಹತ್ವ ಪಡೆದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.