ADVERTISEMENT

ಅಲೋಕ್‌ಕುಮಾರ್ ಮತ್ತೆ ವರ್ಗಾವಣೆ

ಐಪಿಎಸ್ ಅಧಿಕಾರಿಗಳ ಎತ್ತಂಗಡಿ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2013, 19:59 IST
Last Updated 12 ಏಪ್ರಿಲ್ 2013, 19:59 IST

ಬೆಂಗಳೂರು: ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಕಮಿಷನರ್ (ಕಾನೂನು ಮತ್ತು ಸುವ್ಯವಸ್ಥೆ) ಹುದ್ದೆಗೆ ಇತ್ತೀಚೆಗಷ್ಟೇ ನೇಮಕಗೊಂಡಿದ್ದ ಐಪಿಎಸ್ ಅಧಿಕಾರಿ ಅಲೋಕ್‌ಕುಮಾರ್ ಅವರನ್ನು ಕುಂದುಕೊರತೆ ಮತ್ತು ಮಾನವ ಹಕ್ಕುಗಳ ಮುಖ್ಯ ಕಚೇರಿಯ ಐಜಿಪಿ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಹೆಚ್ಚುವರಿ ಪೊಲೀಸ್ ಕಮಿಷನರ್ ಹುದ್ದೆಯಿಂದ ವರ್ಗಾವಣೆಗೊಂಡ ಬಳಿಕ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಐಪಿಎಸ್ ಅಧಿಕಾರಿ ಟಿ.ಸುನೀಲ್‌ಕುಮಾರ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಐಜಿಪಿ ಹುದ್ದೆಗೆ ನೇಮಕ ಮಾಡಲಾಗಿದೆ.

ಈ ಮೊದಲು ಸುನೀಲ್‌ಕುಮಾರ್ ಹೆಚ್ಚುವರಿ ಪೊಲೀಸ್ ಕಮಿಷನರ್ ಹುದ್ದೆಯಲ್ಲಿದ್ದರು. ಅವರನ್ನು ವರ್ಗಾವಣೆ ಮಾಡಿದ್ದ ಸರ್ಕಾರ, ಆ ಸ್ಥಾನಕ್ಕೆ ನಕ್ಸಲ್ ನಿಗ್ರಹ ಪಡೆಯ ಐಜಿಪಿ ಹುದ್ದೆಯಲ್ಲಿದ್ದ ಅಲೋಕ್‌ಕುಮಾರ್ ಅವರನ್ನು ನೇಮಿಸಿತ್ತು. ಈ ವರ್ಗಾವಣೆಯನ್ನು ಪ್ರಶ್ನಿಸಿ ಸುನೀಲ್‌ಕುಮಾರ್ ಕೇಂದ್ರ ಆಡಳಿತ ನ್ಯಾಯಮಂಡಳಿಗೆ (ಸಿಎಟಿ) ಅರ್ಜಿ ಸಲ್ಲಿಸಿದ್ದರು. ಆರಂಭದಲ್ಲಿ ವರ್ಗಾವಣೆಗೆ ಮಧ್ಯಂತರ ತಡೆ ನೀಡಿದ್ದ ಸಿಎಟಿ, ನಂತರ ಸುನೀಲ್‌ಕುಮಾರ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಬಳಿಕ ಅವರು ಸಿಎಟಿ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ರಾಜ್ಯ ಪೊಲೀಸ್ ಸಿಬ್ಬಂದಿ ಮಂಡಳಿಯ ಅಭಿಪ್ರಾಯ ಪಡೆಯದೇ ವರ್ಗಾವಣೆ ಮಾಡಿರುವುದು ಕಾನೂನುಬಾಹಿರ ಎಂದು ತೀರ್ಪಿನಲ್ಲಿ ಅಭಿಪ್ರಾಯಪಟ್ಟಿತ್ತು.

ಇಬ್ಬರೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಾರ್ಚ್ 11ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದ್ದ ಹೈಕೋರ್ಟ್, ಹೊಸದಾಗಿ ಪೊಲೀಸ್ ಸಿಬ್ಬಂದಿ ಮಂಡಳಿಯ ಅಭಿಪ್ರಾಯ ಪಡೆದು ಹೆಚ್ಚುವರಿ ಪೊಲೀಸ್ ಕಮಿಷನರ್‌ರನ್ನು ನೇಮಕ ಮಾಡುವಂತೆ ಆದೇಶಿಸಿತ್ತು. ಹೈಕೋರ್ಟ್ ಆದೇಶದ ಅನುಸಾರ ಅಲೋಕ್‌ಕುಮಾರ್ ಅವರನ್ನು ಈ ಹುದ್ದೆಯಿಂದ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಹೆಚ್ಚುವರಿ ಪೊಲೀಸ್ ಕಮಿಷನರ್ ಹುದ್ದೆಗೆ ಯಾರನ್ನೂ ನೇಮಿಸಿಲ್ಲ. ಹೈಕೋರ್ಟ್ ನಿರ್ದೇಶನದಂತೆ ಪೊಲೀಸ್ ಸಿಬ್ಬಂದಿ ಮಂಡಳಿಯ ಅಭಿಪ್ರಾಯ ಪಡೆದ ಬಳಿಕ ನೇಮಕಾತಿ ಆದೇಶ ಹೊರಡಿಸಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಕೆಎಎಸ್ ವರ್ಗಾವಣೆ: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಇಬ್ಬರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಪಿ.ಎನ್.ರವೀಂದ್ರ ಅವರನ್ನು ಗುಲ್ಬರ್ಗ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಜ್ಞಾನೇಶ್ ಅವರನ್ನು ಪಾಂಡವಪುರ ಉಪ ವಿಭಾಗಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.