ADVERTISEMENT

ಆಂಧ್ರ:ರಾಷ್ಟ್ರಪತಿ ಆಡಳಿತ ಇಲ್ಲ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2011, 19:30 IST
Last Updated 8 ಅಕ್ಟೋಬರ್ 2011, 19:30 IST

ನವದೆಹಲಿ (ಪಿಟಿಐ): ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಹೆಚ್ಚಿದ ಒತ್ತಡದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯದ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಗಳ ಜತೆ ಸಮಾಲೋಚನೆ ನಡೆಸಿದೆ. ಜತೆಗೆ ಆಂಧ್ರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಕುರಿತು ಎದ್ದಿರುವ ವದಂತಿಗಳಿಗೆ ತೆರೆ ಎಳೆಯಲಾಗಿದೆ.

ರಾಜ್ಯಪಾಲ ಇಎಸ್‌ಎಲ್ ನರಸಿಂಹನ್ ಅವರು ಶನಿವಾರ ಬೆಳಿಗ್ಗೆ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಆಂಧ್ರ ಪ್ರದೇಶ ಮುಖ್ಯವಾಗಿ ತೆಲಂಗಾಣ ಪ್ರಾಂತ್ಯದಲ್ಲಿನ ಪರಿಸ್ಥಿತಿ ಹಾಗೂ 27ನೇ ದಿನಕ್ಕೆ ಕಾಲಿಟ್ಟಿರುವ ಪ್ರತಿಭಟನೆ ಕುರಿತು ಈ ಸಂದರ್ಭದಲ್ಲಿ ನರಸಿಂಹನ್ ಅವರು ಪ್ರಧಾನಿಗೆ ಮನವರಿಕೆ ಮಾಡಿದರು ಎನ್ನಲಾಗಿದೆ.

ಅಲ್ಲದೆ ನರಸಿಂಹನ್ ಅವರು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರನ್ನೂ ಭೇಟಿ ಮಾಡಿದ್ದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಯಾವುದೇ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಜನರಿಂದ ಆಯ್ಕೆಯಾದ ಜನಪ್ರಿಯ ಸರ್ಕಾರ ಇದ್ದು, ಅದು ಯಥಾ ರೀತಿ ಅಧಿಕಾರದಲ್ಲಿ ಮುಂದುವರೆಯುವುದು ಎಂದು ಹೇಳಿದರು.

ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರೂ ಪ್ರಧಾನಿಗಳನ್ನು ಭೇಟಿ ಮಾಡಿದ್ದರು. ಸಭೆಯ ನಂತರ ಮಾತನಾಡಿದ ರೆಡ್ಡಿ, ಕೇಂದ್ರ ಸರ್ಕಾರ ಸಮಸ್ಯೆಗೆ ಶೀಘ್ರವೇ ಪರಿಹಾರ ಕಂಡು ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.