ADVERTISEMENT

ಆರ್ಥಿಕ ಸುಧಾರಣಾ ಕ್ರಮಗಳಿಗೆ ಸಂಸತ್ತಿನ ಒಪ್ಪಿಗೆ ಪಡೆಯಲಿ: ಬಿಜೆಪಿ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2012, 19:30 IST
Last Updated 14 ಅಕ್ಟೋಬರ್ 2012, 19:30 IST

ಹೈದರಾಬಾದ್ (ಪಿಟಿಐ):  ಚಿಲ್ಲರೆ ವಹಿವಾಟು, ಪಿಂಚಣಿ, ವಿಮೆ ಮತ್ತಿತರ ಕ್ಷೇತ್ರಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಸಂಬಂಧ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಯುಪಿಎ ಸಂಸತ್ತಿನ ಒಪ್ಪಿಗೆ ಪಡೆಯಬೇಕಾಗುತ್ತದೆ ಎಂದು ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಯುಪಿಎ ಸರ್ಕಾರದ ಈ ಆರ್ಥಿಕ ಸುಧಾರಣಾ ಕ್ರಮಗಳು ಬಡವರ ಅದರಲ್ಲೂ ಶ್ರೀಸಾಮಾನ್ಯನ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ. ಅವರ ಈ ಸುಧಾರಣಾ ಕ್ರಮಗಳು ನಿಜಕ್ಕೂ ಬಡವರ ಪರವಾಗಿದ್ದರೆ ಸಂಸತ್ತನ್ನು ವಿಸರ್ಜಿಸಿ ಹೊಸದಾಗಿ ಜನಾದೇಶ ಪಡೆಯಲಿ. ತೃಣಮೂಲ ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ನೀಡಿದ್ದ ತನ್ನ ಬೆಂಬಲವನ್ನು ಹಿಂದಕ್ಕೆ ಪಡೆದಿದ್ದರಿಂದ ಯುಪಿಎಗೆ ಇಂತಹ ಪ್ರಮುಖ ವಿಷಯುಗಳ ಕುರಿತು ನಿರ್ಧಾರ ತೆಗೆದುಕೊಳ್ಳುವ ಯಾವ ನೈತಿಕತೆಯೂ ಉಳಿದಿಲ್ಲ ಎಂದರು.

ಉತ್ತರಾಖಂಡ್ ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆದ ಲೋಕಸಭಾ ಉಪ ಚುನಾವಣಾ ಫಲಿತಾಂಶಗಳು ಮನಮೋಹನ್ ಸಿಂಗ್ ಸರ್ಕಾರದ ಕಾರ್ಯವೈಖರಿಯನ್ನು ಎತ್ತಿತೋರಿಸುತ್ತಿದ್ದು ಜನ ಈ ಸರ್ಕಾರದಲ್ಲಿ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದರು.

ತೆಲಂಗಾಣಕ್ಕೆ ಪ್ರತ್ಯೇಕ ರಾಜ್ಯದ ಸ್ಥಾನಮಾನ ನೀಡುವ ಬೇಡಿಕೆಯ ಕುರಿತು ಪ್ರತಿಕ್ರಿಯಿಸಿದ ವೆಂಕಯ್ಯ ನಾಯ್ಡು ಅವರು , `ಯುಪಿಎ ಸರ್ಕಾರ ಈ ವಿಷಯದಲ್ಲಿ ತನ್ನ ವಚನ ಮರೆತಿದ್ದು, ಅವಕಾಶವಾದಿ ರಾಜಕೀಯ ಮಾಡುತ್ತಿದೆ~ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.