ADVERTISEMENT

ಎಸ್‌ಸಿ/ಎಸ್‌ಟಿ ಕಾಯ್ದೆ: ಕಾಂಗ್ರೆಸ್‌ ಪ್ರತಿಭಟನೆ

ಸುಪ್ರೀಂ ಆದೇಶದ ವಿರುದ್ಧ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಕೇಂದ್ರದ ಮೇಲೆ ಒತ್ತಡ

ಪಿಟಿಐ
Published 24 ಮಾರ್ಚ್ 2018, 4:15 IST
Last Updated 24 ಮಾರ್ಚ್ 2018, 4:15 IST
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ಎ.ಕೆ. ಆಂಟನಿ ಹಾಗೂ ಇತರ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ಸಂಸತ್‌ ಭವನದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು –ಪಿಟಿಐ ಚಿತ್ರ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ಎ.ಕೆ. ಆಂಟನಿ ಹಾಗೂ ಇತರ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ಸಂಸತ್‌ ಭವನದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು –ಪಿಟಿಐ ಚಿತ್ರ   

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಕುರಿತು ಸುಪ್ರೀಂ ಕೋರ್ಟ್‌ ತೀರ್ಪಿನ ವಿರುದ್ಧ ಮರು ಪರಿಶೀಲನಾ ಅರ್ಜಿ ಸಲ್ಲಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷದ ಸಂಸದರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಎಸ್‌ಸಿ/ಎಸ್‌ಟಿ ಕಾಯ್ದೆ ದುರ್ಬಳಕೆಗೆ ಅಂಕುಶ ಹಾಕುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್‌ ಮಂಗಳವಾರ ಕೆಲವು ನಿರ್ದೇಶನ ಮತ್ತು ಮಾರ್ಗಸೂಚಿ ನೀಡಿತ್ತು.

ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಸರಿಯಾಗಿ ವಾದ ಮಂಡಿಸಲಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ADVERTISEMENT

ಕೇಂದ್ರ ಸರ್ಕಾರ ತನ್ನ ತಪ್ಪನ್ನು ಸರಿಪಡಿಸಿಕೊಳ್ಳಲುಇನ್ನೂ ಕಾಲ ಮಿಂಚಿಲ್ಲ. ತೀರ್ಪಿನ ವಿರುದ್ಧ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕು ಮತ್ತು ಪರಿಶಿಷ್ಟರ ಹಕ್ಕುಗಳ ರಕ್ಷಿಸಲು ಎಸ್‌ಸಿ/ಎಸ್‌ಟಿ ಕಾಯ್ದೆಗೆ  ತಿದ್ದುಪಡಿ ತರುವಂತೆ ಪ್ರತಿಭಟನಾಕಾರರು ಬೇಡಿಕೆ ಇರಿಸಿದರು.

ಸಂಸತ್‌ ಭವನದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುವ ಮೊದಲು ಕಾಂಗ್ರೆಸ್ ಸಂಸದೀಯ ಮಂಡಳಿ ಕಚೇರಿಯಲ್ಲಿ ಸಭೆ ಸೇರಿದ್ದ ಸಂಸದರು, ಈ ವಿಷಯದಲ್ಲಿ ಮುಂದಿನ ಹೆಜ್ಜೆ ಕುರಿತು ಚರ್ಚೆ ನಡೆಸಿದರು. ಸಂಸತ್‌ ಕಲಾಪದ ವೇಳೆ ಪಕ್ಷ ಅನುಸರಿಸಬೇಕಾದ ನೀತಿ ಕುರಿತು ರಾಹುಲ್‌ ಜತೆ ಚರ್ಚೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.

ಕೇಂದ್ರದಿಂದ ಚರ್ಚೆ: ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಮರುಪರಿಶೀಲನಾ ಅರ್ಜಿ ಸಲ್ಲಿಸುವ ಬಗ್ಗೆ ಕೇಂದ್ರ ಸರ್ಕಾರ ಚರ್ಚೆ ನಡೆಸುತ್ತಿದೆ. ಈ ಕುರಿತು ಅಂತಿಮ ನಿರ್ಣಯ ಕೈಗೊಳ್ಳಲು ಜೇಟ್ಲಿ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.

ದೌರ್ಜನ್ಯಕ್ಕೀಡಾಗುವ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ತ್ವರಿತ ನ್ಯಾಯ ಒದಗಿಸುವ ಈ ಕಾಯ್ದೆಯ ಮೂಲ ಉದ್ದೇಶವೇ ಸುಪ್ರೀಂ ಆದೇಶದಿಂದಾಗಿ ಮರೆಯಾಗಬಹುದು ಎಂದು ಸಾಮಾಜಿಕ ನ್ಯಾಯ ಸಚಿವಾಲಯ ಅಭಿಪ್ರಾಯಪಟ್ಟಿದೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರಚಂದ್ ಗೆಹ್ಲೋಟ್ ಅವರು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಅಮಿತ್ ಷಾ, ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

**

ಸರ್ಕಾರದ ಧೋರಣೆಗೆ ಬಿಜೆಪಿ ಸಂಸದರ ಅಸಮಾಧಾನ

ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ದುರ್ಬಲಗೊಳಿಸಿದ ಸುಪ್ರೀಂ ಕೋರ್ಟ್‌ ಆದೇಶವನ್ನು ಪ್ರಶ್ನಿಸುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಅಥವಾ ವಿಳಂಬ ನೀತಿ ಅನುಸರಿಸಿದರೆ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ದೆಹಲಿಯ ಬಿಜೆಪಿ ಸಂಸದ ಉದಿತ್‌ ರಾಜ್‌ ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.

ಈ ವಿಷಯದಲ್ಲಿ ಕೇಂದ್ರ ತಕ್ಷಣ ಯಾವುದೇ ಕ್ರಮ ಜರುಗಿಸದಿದ್ದರೆ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಲು ಅವರು ಪ್ರಧಾನಿಯನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. ಈಗಾಗಲೇ ಬಿಜೆಪಿಯ ಕೆಲವು ದಲಿತ ಸಂಸದರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಕಂಡು ಪರಿಸ್ಥಿತಿಯನ್ನು ವಿವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸರ್ಕಾರ ವಿಳಂಬ ಮಾಡದೆ ತೀರ್ಪಿನ ವಿರುದ್ಧ ಮರು ಪರಿಶೀಲನಾ ಅರ್ಜಿ ಸಲ್ಲಿಸದಿದ್ದರೆ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತದೆ ಎಂದು ಸಂಸದರು ನೇರವಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

**

ಕೇಂದ್ರದಿಂದ ಚರ್ಚೆ

ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಮರುಪರಿಶೀಲನಾ ಅರ್ಜಿ ಸಲ್ಲಿಸುವ ಬಗ್ಗೆ ಕೇಂದ್ರ ಸರ್ಕಾರ ಚರ್ಚೆ ನಡೆಸುತ್ತಿದೆ. ಈ ಕುರಿತು ಅಂತಿಮ ನಿರ್ಣಯ ಕೈಗೊಳ್ಳಲು ಜೇಟ್ಲಿ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.

ದೌರ್ಜನ್ಯಕ್ಕೀಡಾಗುವ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ತ್ವರಿತ ನ್ಯಾಯ ಒದಗಿಸುವ ಈ ಕಾಯ್ದೆಯ ಮೂಲ ಉದ್ದೇಶವೇ ಸುಪ್ರೀಂ ಆದೇಶದಿಂದಾಗಿ ಮರೆಯಾಗಬಹುದು ಎಂದು ಸಾಮಾಜಿಕ ನ್ಯಾಯ ಸಚಿವಾಲಯ ಅಭಿಪ್ರಾಯಪಟ್ಟಿದೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ತಾವರ್‌ಚಂದ್ ಗೆಹ್ಲೋಟ್ ಅವರು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಅಮಿತ್ ಷಾ, ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

**

ಸುಪ್ರೀಂ ನೀಡಿರುವ ಆದೇಶ ಬಹುತೇಕ ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ರದ್ದುಗೊಳಿಸುವಂತೆಯೇ ಇದೆ. ಸರ್ಕಾರ ಸೂಕ್ತವಾಗಿ ವಾದ ಮಂಡಿಸಿಲ್ಲ.

-ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.