ADVERTISEMENT

ಎಸ್‌ಸಿ, ಎಸ್‌ಟಿ ಕಾಯ್ದೆ: ಮುಂದಿನ ವಾರ ಮರುಪರಿಶೀಲನೆ ಅರ್ಜಿ

ಪಿಟಿಐ
Published 29 ಮಾರ್ಚ್ 2018, 19:30 IST
Last Updated 29 ಮಾರ್ಚ್ 2018, 19:30 IST

ನವದೆಹಲಿ: ಪ‍ರಿಶಿಷ್ಟ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯದ ಬಗ್ಗೆ ದೂರು ನೀಡಿದ ಕೂಡಲೇ ಆರೋಪಿಗಳ ಬಂಧನ ಮತ್ತು ಪ್ರಕರಣ ದಾಖಲು ಅಗತ್ಯ ಇಲ್ಲ ಎಂಬ ಸುಪ್ರೀಂ ಕೋರ್ಟ್‌ ತೀರ್ಪನ್ನು ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮುಂದಿನ ವಾರ ಮನವಿ ಸಲ್ಲಿಸಲಿದೆ.

ತಳ್ಳಿ ಹಾಕಲಾಗದಂತಹ ಮರುಪರಿಶೀಲನೆ ಅರ್ಜಿ ಸಿದ್ಧಪಡಿಸುವುದಕ್ಕಾಗಿ ಕಾನೂನು ಸಚಿವಾಲಯ ಮತ್ತು ಸಾಮಾಜಿಕ ನ್ಯಾಯ ಸಚಿವಾಲಯದ ಅಧಿಕಾರಿಗಳು ನಿರಂತರವಾಗಿ ಚರ್ಚೆ ನಡೆಸುತ್ತಿದ್ದಾರೆ. ಮಂಗಳವಾರದ ಹೊತ್ತಿಗೆ ಮರುಪರಿಶೀಲನೆ ಕೋರಿಕೆಯ ಅರ್ಜಿ ಸಿದ್ಧವಾಗಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ, ಪಂಗಡಗಳ ಕಾಯ್ದೆಗೆ ಹೊಸ ನಿಯಮಗಳನ್ನು ರೂಪಿಸುವ ಬಗ್ಗೆ ಸುಪ್ರೀಂ ಕೋರ್ಟ್‌ ನೀಡಿದ ಆದೇಶವನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್‌ ಹೇಳಿದ್ದಾರೆ. ‘ಮರುಪರಿಶೀಲನಾ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸಮರ್ಪಕವಾದ ಅನುಸರಣೆ ಕೆಲಸಗಳನ್ನೂ ನಡೆಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ದೂರು ಸಲ್ಲಿಕೆಯಾದ ಕೂಡಲೇ ಆರೋ‍ಪಿಗಳನ್ನು ಬಂಧಿಸುವುದು ಮತ್ತು ದೂರು ದಾಖಲಿಸುವುದನ್ನು ನಿಷೇಧಿಸಿ ಸುಪ್ರೀಂ ಕೋರ್ಟ್‌ ಇತ್ತೀಚೆಗೆ ಆದೇಶ ನೀಡಿತ್ತು.

ಎನ್‌ಡಿಎಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ಸಂಸದರು ಎಲ್‌ಜೆಪಿಯ ಮುಖ್ಯಸ್ಥ ರಾಮ್‌ವಿಲಾಸ್‌ ಪಾಸ್ವಾನ್‌ ಮತ್ತು ಕೇಂದ್ರದ ಸಾಮಾಜಿಕ ನ್ಯಾಯ ಸಚಿವ ತಾವರ್‌ಚಂದ್‌ ಗೆಹ್ಲೋಟ್‌ ಅವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ಭೇಟಿಯಾಗಿ ಸುಪ್ರೀಂ ಕೋರ್ಟ್‌ ಆದೇಶದ ಬಗ್ಗೆ ಚರ್ಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.