ADVERTISEMENT

ಒಳಮೀಸಲಾತಿ: ಕೇಂದ್ರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2012, 19:30 IST
Last Updated 2 ಮಾರ್ಚ್ 2012, 19:30 IST

ಅಲಹಾಬಾದ್ (ಪಿಟಿಐ):  ಇತರೆ ಹಿಂದುಳಿದ ವರ್ಗಗಳಿಗೆ ಮೀಸಲಿಟ್ಟ ಶೇ 27ರ ಮೀಸಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ಶೇ 4.5ರಷ್ಟು ಒಳಮೀಸಲಾತಿ ಕಲ್ಪಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಾಮಾಜಿಕ ಸಂಸ್ಥೆಯೊಂದು ಅಲಹಾಬಾದ್ ಹೈಕೋರ್ಟ್‌ನಲ್ಲಿ ಶುಕ್ರವಾರ ಅರ್ಜಿ ಸಲ್ಲಿಸಿದೆ.

ಈ ಸಂಬಂಧ ಕೇಂದ್ರ ಸರ್ಕಾರ ಡಿಸೆಂಬರ್ 22ರಂದು ಹೊರಡಿಸಿರುವ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಹಾಗೂ ಗೆಜೆಟ್‌ನಲ್ಲಿ ಅದನ್ನು ಪ್ರಕಟಿಸದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ `ಪ್ರಹರಿ~ ಸಂಸ್ಥೆ ತಾನು ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಕೇಳಿಕೊಂಡಿದೆ.

ಈ ರಿಟ್ ಅರ್ಜಿ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಾಗ ಕೇಂದ್ರ ಸರ್ಕಾರದ ವಕೀಲರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಅರ್ಜಿ ಸಲ್ಲಿಸಿರುವ `ಪ್ರಹರಿ~ ಸಂಸ್ಥೆಗೆ ಒಳಮೀಸಲಾತಿಯಿಂದ ಯಾವುದೇ ಧಕ್ಕೆಯಾಗುವುದಿಲ್ಲ ಎಂದರು.

ಆಗ ಆ ಸಂಸ್ಥೆಯ ವಕೀಲರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ರೂಪದಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಲು ಅನುಮತಿ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿಕೊಂಡರು. ಮಾರ್ಚ್ 21ರಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ವಿಚಾರಣೆಗೆ ಬರುವ ಮುನ್ನ ಅರ್ಜಿ ಸಲ್ಲಿಸುವಂತೆ ಕೋರ್ಟ್ ಸೂಚಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.