ADVERTISEMENT

ಕೇಂದ್ರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ: ತಮಿಳುನಾಡು

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2018, 19:30 IST
Last Updated 29 ಮಾರ್ಚ್ 2018, 19:30 IST
ಸಾಂದರ್ಭಿಕ ಚಿತ್ರ.
ಸಾಂದರ್ಭಿಕ ಚಿತ್ರ.   

ಚೆನ್ನೈ: ‘ಸುಪ್ರೀಂ ಕೋರ್ಟ್‌ ಆದೇಶದಂತೆ ಆರು ವಾರಗಳ ಗಡುವಿನಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚಿಸದ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ’ ಎಂದು ತಮಿಳುನಾಡು ಸರ್ಕಾರ ಹೇಳಿದೆ.

ಕಾವೇರಿ ನೀರು ಹಂಚಿಕೆ ವಿವಾದ ಪರಿಹಾರ ನ್ಯಾಯಮಂಡಳಿ 2007ರಲ್ಲಿ ನೀಡಿದ್ದ ತೀರ್ಪಿನ ಅನ್ವಯ ನೀರು ಹಂಚಿಕೆಗೆ ಆರು ವಾರಗಳಲ್ಲಿ ಯೋಜನೆ ರೂಪಿಸಿ ಎಂದು ಸುಪ್ರೀಂ ಕೋರ್ಟ್ ಫೆಬ್ರುವರಿ 16ರಂದು ಆದೇಶಿಸಿತ್ತು. ಆದೇಶ ನೀಡಿ ಗುರುವಾರಕ್ಕೆ ಆರು ವಾರ ಮುಗಿದ ಕಾರಣ ತಮಿಳುನಾಡು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.

ನೀರು ಹಂಚಿಕೆ ಯೋಜನೆ ರೂಪಿಸಿ ಎಂದಷ್ಟೇ ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಅದನ್ನು, ನಿರ್ವಹಣಾ ಮಂಡಳಿ ರಚಿಸಿ ಎಂದು ತಮಿಳುನಾಡು ಸರ್ಕಾರ ತಪ್ಪಾಗಿ ಅರ್ಥೈಸಿಕೊಂಡಿದೆ ಎಂದು ಕರ್ನಾಟಕ ಸರ್ಕಾರ ಪ್ರತಿಪಾದಿಸುತ್ತಿದೆ.

ADVERTISEMENT

‘ಸುಪ್ರೀಂ ಕೋರ್ಟ್‌ ಸೂಚಿಸಿರುವ ‘ಯೋಜನೆ’ ಏನು ಎಂಬುದನ್ನು ಸ್ಪಷ್ಟಪಡಿಸುವಂತೆ ಅರ್ಜಿ ಸಲ್ಲಿಸಿ ಅಥವಾ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿ ಎಂದು ಕಾನೂನು ತಜ್ಞರು ಸರ್ಕಾರಕ್ಕೆ ಎರಡು ಸಲಹೆಗಳನ್ನು ನೀಡಿದ್ದರು. ಅವುಗಳಲ್ಲಿ ಎರಡನೇ ಸಲಹೆಯನ್ನು ಸರ್ಕಾರ ಆಯ್ಕೆ ಮಾಡಿಕೊಂಡಿದೆ’ ಎಂದು ಎಐಎಡಿಎಂಕೆಯ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.

‘ನಿರ್ವಹಣಾ ಮಂಡಳಿ ರಚನೆಯಾಗಬೇಕು ಎಂದು ಸಂಸದರು ಮತ್ತು ಶಾಸಕರನ್ನು ಜನರು ಒತ್ತಾಯಿಸುತ್ತಲೇ ಇದ್ದಾರೆ. ನಮ್ಮ ಪಕ್ಷದ ಬಹುತೇಕ ಎಲ್ಲಾ ಸಂಸದರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವುದಾಗಿ ಹೇಳುತ್ತಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸದೆ ಬೇರೆ ವಿಧಿ ಇಲ್ಲ. ನಮ್ಮ ಈ ನಿರ್ಧಾರವನ್ನು ಸಂಸದರಿಗೆ ಮನವರಿಕೆ ಮಾಡಿಕೊಡಬೇಕಿದೆ. ಅವರು ಅದನ್ನು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡಲಿದ್ದಾರೆ’ ಎಂದು ತಿಳಿಸಿದ್ದಾರೆ.

ಸರ್ಕಾರದ ಈ ತೀರ್ಮಾನವನ್ನು ರಾಜ್ಯದ ಅಡ್ವೊಕೇಟ್ ಜನರಲ್ ಅವರಿಗೆ ತಿಳಿಸಲಾಗಿದೆ. ಅವರು ಈಗಾಗಲೇ ಅರ್ಜಿಯನ್ನು ಸಿದ್ಧಪಡಿಸಲು ಮುಂದಾಗಿದ್ದಾರೆ. ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಮಂಡಳಿ ರಚನೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ರಾಜ್ಯ ಸರ್ಕಾರ ಸಾಕಷ್ಟು ಒತ್ತಡ ಹೇರುತ್ತಿಲ್ಲ. ಹೀಗಾಗಿಯೇ ಮಂಡಳಿ ರಚನೆಗೆ ಕೇಂದ್ರ ಮುಂದಾಗುತ್ತಿಲ್ಲ ಎಂದು ವಿರೋಧ ಪಕ್ಷ ಡಿಎಂಕೆ, ಈಗಷ್ಟೇ ರಾಜಕಾರಣಕ್ಕೆ ಬಂದಿರುವ ಕಮಲ್ ಹಾಸನ್ ಮತ್ತು ರಜನಿಕಾಂತ್ ಆರೋಪಿಸಿದ್ದಾರೆ.

*
ರಾಜ್ಯದ ಹಿತಾಸಕ್ತಿಯ ವಿಚಾರದಲ್ಲಿ ನಾವು ರಾಜಿಯಾಗುವುದಿಲ್ಲ, ಬಿಜೆಪಿ ಕುಣಿಸಿದಂತೆ ನಾವು ಕುಣಿಯುವುದಿಲ್ಲ ಎಂಬ ಸಂದೇಶ ರವಾನಿಸಿದ್ದೇವೆ.
–ತಮಿಳುನಾಡು ಸರ್ಕಾರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.