ADVERTISEMENT

ಕ್ಷಮಾದಾನ ಅರ್ಜಿ: ವಿವರ ನೀಡಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2012, 19:30 IST
Last Updated 3 ಏಪ್ರಿಲ್ 2012, 19:30 IST

ನವದೆಹಲಿ (ಪಿಟಿಐ): ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ರಾಷ್ಟ್ರಪತಿ ಅವರ ಮುಂದಿರುವ 18 ಕ್ಷಮಾದಾನ ಕೋರಿಕೆಯ ಅರ್ಜಿಗಳ ವಿವರ ನೀಡುವಂತೆ ಸೂಚಿಸಿದೆ. ಇದರಲ್ಲಿ ಸಂಸತ್ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವ ಅಫ್ಜಲ್ ಗುರು ಅರ್ಜಿ ಕೂಡ ಸೇರಿದೆ.

ನ್ಯಾಯಮೂರ್ತಿಗಳಾದ ಜಿ.ಎಸ್. ಸಿಂಘ್ವಿ ಮತ್ತು ಎಸ್.ಜೆ. ಮುಖ್ಯೋಪಾಧ್ಯಾಯ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು, `ಕ್ಷಮಾದಾನ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಬಗ್ಗೆ  ತೀರ್ಮಾನ ಕೈಗೊಳ್ಳುವ ಸಂದರ್ಭದಲ್ಲಿ ರಾಷ್ಟ್ರಪತಿ ಅವರು ವಸ್ತುನಿಷ್ಠವಾಗಿ ಕರ್ತವ್ಯ ನಿರ್ವಹಿಸಬೇಕೇ ಎಂಬ ಕುರಿತು ಲಿಖಿತವಾಗಿ ಅಭಿಪ್ರಾಯ ಸಲ್ಲಿಸುವಂತೆ~ ಈ ಪ್ರಕರಣದ ಅರ್ಜಿದಾರರಿಗೆ ಸೂಚಿಸಿದೆ.

ಕ್ಷಮಾದಾನ ಅರ್ಜಿಗಳ ವಿಚಾರದಲ್ಲಿ ಸರ್ಕಾರ ಸಲಹೆ ನೀಡಬಹುದು. ಆದರೆ ಅಂತಿಮ ತೀರ್ಮಾನ ಕೈಗೊಳ್ಳಬೇಕಾದವರು ರಾಷ್ಟ್ರಪತಿಗಳೇ ಎಂದು ಪೀಠ ಅಭಿಪ್ರಾಯಪಟ್ಟಿದೆ.

ADVERTISEMENT

ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳು ಕ್ಷಮಾದಾನ ಕೋರಿ ರಾಷ್ಟ್ರಪತಿ ಅವರಿಗೆ ಸಲ್ಲಿಸಿರುವ ಅರ್ಜಿಗಳ ಕುರಿತು ತೀರ್ಮಾನ ಕೈಗೊಳ್ಳಲು ಆಗುತ್ತಿರುವ ವಿಳಂಬದ ಬಗ್ಗೆ ಹಿರಿಯ ವಕೀಲರು, ಕಾನೂನು ಇಲಾಖೆಯ ಮಾಜಿ ಸಚಿವರೂ ಆದ ರಾಮ್ ಜೇಠ್ಮಲಾನಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು  ನ್ಯಾಯಪೀಠ ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.