ADVERTISEMENT

ಗಡ್ಕರಿ ಮಾನಹಾನಿ: ದಿಗ್ವಿಜಯ ಸಿಂಗ್‌ಗೆ ಸಮನ್ಸ್ ಜಾರಿ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2012, 19:30 IST
Last Updated 17 ನವೆಂಬರ್ 2012, 19:30 IST

ನವದೆಹಲಿ (ಪಿಟಿಐ): ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಅವರ ವಿರುದ್ಧ ದಾಖಲಿಸಿದ್ದ ಮಾನಹಾನಿ ಮೊಕದ್ದಮೆಗೆ ಸಂಬಂಧಿಸಿದಂತೆ ವಿಚಾರಣೆಗೆ ಖುದ್ದು ಹಾಜರಾಗುವಂತೆ ದಿಗ್ವಿಜಯ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯವು ಶನಿವಾರ ಸಮನ್ಸ್ ಜಾರಿ ಮಾಡಿದೆ.

ದಿಗ್ವಿಜಯ ಅವರು ಡಿಸೆಂಬರ್ 21ರಂದು ವಿಚಾರಣೆ ಎದುರಿಸಬೇಕು ಎಂದು ಇಲ್ಲಿನ ಮೆಟ್ರೊಪಾಲಿಟನ್ ನ್ಯಾಯಾಲಯದ ನ್ಯಾಯಾಧೀಶ ಸುದೇಶ್ ಕುಮಾರ್ ಸೂಚಿಸಿದ್ದಾರೆ.

ಕಲ್ಲಿದ್ದಲು ಗಣಿ ಹಂಚಿಕೆ ಹಗರಣದಲ್ಲಿ ಹೆಚ್ಚು ಲಾಭ ಮಾಡಿಕೊಂಡ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಅಜೇಯ್ ಸಾಂಚೇತಿ ಅವರ ಜತೆ ಗಡ್ಕರಿ ಅವರಿಗೆ ವ್ಯಾಪಾರ ಸಂಬಂಧವಿದೆ ಎಂದು ದಿಗ್ವಿಜಯ ಸಿಂಗ್ ಆಪಾದಿಸಿದ್ದರು. ಈ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ- 499 ಮತ್ತು 500ರಡಿ ಗಡ್ಕರಿ ಕ್ರಿಮಿನಲ್ ಮಾನಹಾನಿ ಮೊಕದ್ದಮೆ ದಾಖಲಿಸಿದ್ದರು.

ಗಡ್ಕರಿ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಸಂಸದ ಭೂಪೇಂದ್ರ ಯಾದವ್ ಅವರ ಹೇಳಿಕೆಯನ್ನು ನ್ಯಾಯಾಲಯವು ದಾಖಲಿಸಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.