ADVERTISEMENT

ಗುಜರಾತ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ನರೇಂದ್ರ ಮೋದಿ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2013, 19:59 IST
Last Updated 6 ಸೆಪ್ಟೆಂಬರ್ 2013, 19:59 IST

ಅಹಮದಾಬಾದ್ (ಪಿಟಿಐ): ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ತಿರುಗಿ ಬಿದ್ದಿರುವ ನಿವೃತ್ತ ಐಪಿಎಸ್ ಅಧಿಕಾರಿ ಡಿ.ಜಿ. ವಂಜಾರಾ ಪ್ರಕರಣದ ಹಿನ್ನೆಲೆಯಲ್ಲಿ ಮೋದಿ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಶುಕ್ರವಾರ ಕರೆ ನೀಡಿದ್ದ ರಾಜ್ಯವ್ಯಾಪಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಒತ್ತಾಯದಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದರು. ಬಸ್ ಹಾಗೂ ರೈಲುಗಳ ಸಂಚಾರಕ್ಕೆ ಅಡ್ಡಿಪಡಿಸಿದ 600 ಕ್ಕೂ ಹೆಚ್ಚು ಜನರನ್ನು, ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಬಂದ್‌ನಿಂದಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಜ್ಯದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.  ಭದ್ರತೆಗಾಗಿ 60 ಸಾವಿರ ಪೊಲೀಸರು ಹಾಗೂ ಇತರ ಸಿಬ್ಬಂದಿ ನೇಮಿಸಲಾಗಿತ್ತು.  ಸೂಕ್ಷ್ಮ ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಪರಾಧ ವಿಭಾಗದ ಪೊಲೀಸರನ್ನು ನೇಮಿಸಲಾಗಿತ್ತು.

ಬಂದ್ ನಡುವೆಯೂ ಹಲವೆಡೆ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿದವು.  ಅಹಮದಾಬಾದ್‌ನ ಹಳೆ ನಗರ, ವದಾಜ್ ಹಾಗೂ ಪೂರ್ವ ಭಾಗದಲ್ಲಿ ಶೇ 80ರಷ್ಟು ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ವಡೋದರದಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಮಾಂಡ್ವಿ, ಕಿರೊಲಿಯಾ, ಸಾಮಾ, ಕರೇಲಿಬಾಗ್ ಹಾಗೂ ಪ್ರತಾಪ್‌ಗಂಜ್ ಪ್ರದೇಶದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಬಂಧಿಸಿದರು.

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಒಂದು ಕಾಲದ ಪರಮಾಪ್ತ ಹಾಗೂ ನಕಲಿ ಎನ್‌ಕೌಂಟರ್‌ನಿಂದ ಕುಖ್ಯಾತಿಗೆ ಒಳಗಾಗಿದ್ದ  ಗುಜರಾತ್‌ನ ಮಾಜಿ ಡಿಐಜಿ ವಂಜಾರಾ ಮಂಗಳವಾರ ಹಠಾತ್ ರಾಜೀನಾಮೆ ನೀಡಿದ್ದಲ್ಲದೇ ಮೋದಿ ಹಾಗೂ ಅಮಿತ್ ಷಾ ವಿರುದ್ಧವೇ ತಿರುಗಿ ಬೀಳುವ ಮೂಲಕ ಅಚ್ಚರಿ ಮೂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.