ADVERTISEMENT

ಚಿಲ್ಲರೆ ಕ್ಷೇತ್ರ: ಎಫ್‌ಡಿಐ ಬೇಡ

​ಪ್ರಜಾವಾಣಿ ವಾರ್ತೆ
Published 22 ಜುಲೈ 2012, 19:30 IST
Last Updated 22 ಜುಲೈ 2012, 19:30 IST

ನವದೆಹಲಿ (ಪಿಟಿಐ): ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಸಮಾಜವಾದಿ ಪಕ್ಷ ಸೇರಿದಂತೆ  ವಿವಿಧ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು, ಪರಿಸ್ಥಿತಿ, ಪರಿಣಾಮಗಳನ್ನು ಅರಿಯದೇ ಇಂಥ ವಿವಾದಾತ್ಮಕ ನಿರ್ಧಾರಗಳನ್ನು ಕೈಗೊಳ್ಳದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.

ಈ ಸಂಬಂಧ ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್ ಯಾದವ್, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್, ಸಿಪಿಐ ಪ್ರಧಾನ ಕಾರ್ಯದರ್ಶಿ ಎಸ್. ಸುಧಾಕರ ರೆಡ್ಡಿ, ಫಾರ್ವರ್ಡ್ ಬ್ಲಾಕ್‌ನ ದೇವವ್ರತ ಬಿಸ್ವಾಸ್, ಜೆಡಿ(ಎಸ್)ನ ಡ್ಯಾನಿಷ್ ಅಲಿ ಮತ್ತು ಆರ್‌ಎಸ್‌ಪಿಯ ಅಂಬಾನಿ ರಾಯ್ ಅವರು ಜಂಟಿಯಾಗಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಕೃಷಿ ಕ್ಷೇತ್ರ ಹೊರತುಪಡಿಸಿದರೆ, ದೇಶದಲ್ಲಿ ಅತಿ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಎರಡನೇ ಅತಿ ದೊಡ್ಡ ಕ್ಷೇತ್ರವಾಗಿರುವ ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳವನ್ನು ಹೂಡುವ ನಿರ್ಧಾರವನ್ನು ಸರ್ಕಾರ ಮರು ಪರಿಶೀಲಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ. `ಸರ್ಕಾರದ ಈ ನಿರ್ಧಾರಕ್ಕೆ ದೇಶದಾದ್ಯಂತ ವಿವಿಧ ಪಕ್ಷಗಳಿಂದ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ನಿರ್ಧಾರವನ್ನು ಬದಲಿಸಬೇಕು~ ಎಂದು ಹೇಳಲಾಗಿದೆ.

`ಚಿಲ್ಲರೆ ಮಾರಾಟ ಕ್ಷೇತ್ರ ಒಂದು ಅಸಂಘಟಿತ ವಲಯ. ಇಲ್ಲಿ ವಿದೇಶಿ ನೇರ ಬಂಡವಾಳಕ್ಕೆ ಅವಕಾಶ ನೀಡಿದರೆ ಸಣ್ಣ ಪುಟ್ಟ ಕಂಪೆನಿಗಳ ಜಾಗವನ್ನು ಬಹುರಾಷ್ಟ್ರೀಯ ಕಂಪೆನಿಗಳು, ಸೂಪರ್ ಮಾರ್ಕೆಟ್‌ಗಳು ಆಕ್ರಮಿಸಿಕೊಳ್ಳುತ್ತವೆ. ಈಗಾಗಲೇ `ವಾಲ್‌ಮಾರ್ಟ್~ ನಂತಹ ಸೂಪರ್ ಮಾರ್ಕೆಟ್‌ಗಳಿಂದ ದೇಶದ ಮಾರುಕಟ್ಟೆಯಲ್ಲಿ ಉಂಟಾಗಿರುವ ಪರಿಣಾಮಗಳು ನಮ್ಮೆದುರಿಗೆ ಉದಾಹರಣೆಯಾಗಿವೆ~ ಎಂದು ವಿವರಿಸಲಾಗಿದೆ.

`ಬಹುಬ್ರಾಂಡ್ ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡುವ ವಿಚಾರವನ್ನು ಕೇಂದ್ರ ಸರ್ಕಾರ ಪುನಃ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ~ ಎಂಬ ವರದಿಗಳ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಈ ಪತ್ರ ಬರೆದಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.