ಮುಂಬೈ (ಪಿಟಿಐ): ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ತಮ್ಮ ತೇಜೋವಧೆ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಜರುಗಿಸುವಂತೆ ಬಾಲಿವುಡ್ ನಟ ಅಮೀರ್ ಖಾನ್ ಪೊಲೀಸರಿಗೆ ದೂರು ನೀಡಿದ್ದಾರೆ.
ಮುಂಬೈ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಶನಿವಾರ ಜಂಟಿ ಪೊಲೀಸ್ ಆಯುಕ್ತ (ಅಪರಾಧ ತಡೆ ವಿಭಾಗ) ಸದಾನಂದ ಡಾಟೆ ಅವರನ್ನು ಭೇಟಿ ಮಾಡಿದ ಅಮೀರ್ ದೂರು ಸಲ್ಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಕಿಡಿಗೇಡಿಗಳು ತಮ್ಮ ಹೆಸರಿಗೆ ಮಸಿ ಬಳಿಯುವ, ಗೌರವಕ್ಕೆ ಧಕ್ಕೆ ತರುವ ಸಂದೇಶಗಳನ್ನು ಪ್ರಕಟಿಸುತ್ತಿದ್ದಾರೆ. ತಾವು ನಡೆಸಿಕೊಡುತ್ತಿರುವ ‘ಸತ್ಯಮೇವ ಜಯತೆ’ಯ ಬಗ್ಗೆಯೂ ಆಕ್ಷೇಪಾರ್ಹ ಹೇಳಿಕೆ ಪೋಸ್ಟ್ ಮಾಡುತ್ತಿದ್ದಾರೆ ಎಂದು ಅಮೀರ್ ದೂರಿದ್ದಾರೆ.
‘ ಸತ್ಯಮೇಯ ಜಯತೆ’ ಎರಡನೇ ಆವೃತ್ತಿಯಲ್ಲಿ ಮಸೀದಿ ನಿರ್ಮಿಸಲು ದೇಣಿಗೆ ಕೇಳಲಾಗುತ್ತಿದೆ. ಮುಸ್ಲಿಂ ಯುವಕರಿಗೆ ಉದ್ಯೋಗ ನೀಡುವಂತೆ ಕೋರಲು ಈ ಕಾರ್ಯಕ್ರಮವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ’ ಎಂದು ಅಮೀರ್ ಸಾಮಾಜಿಕ ಜಾಲತಾಣಗಳಲ್ಲಿ ಸಮಜಾಯಿಷಿ ನೀಡಿದ್ದಾರೆ.
‘ಸತ್ಯಮೇವ ಜಯತೆ’ ಕಾರ್ಯಕ್ರಮದ ಮೂಲಕ ಸಂಗ್ರಹಿಸಲಾದ ದೇಣಿಗೆಯನ್ನು ಜಾತ್ಯತೀತ ಮತ್ತು ಮಾನವೀಯ ಕೆಲಸಗಳಿಗೆ ಮಾತ್ರ ಬಳಸಲಾಗುತ್ತದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.