ADVERTISEMENT

ತಜ್ಞರಿಗೆ ಚುನಾವಣಾ ಆಯೋಗದ ಮನವಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2018, 19:30 IST
Last Updated 27 ಮಾರ್ಚ್ 2018, 19:30 IST

ನವದೆಹಲಿ: ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣದ ದುರ್ಬಳಕೆಯಲ್ಲಿ ತೊಡಗಿದ್ದಾರೆಯೇ ಎಂಬುದರ ಬಗ್ಗೆ ನಿಗಾ ವಹಿಸುವಂತೆ ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮಾಹಿತಿ ತಂತ್ರಜ್ಞಾನ ತಜ್ಞರಿಗೆ ಮನವಿ ಮಾಡಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಕರ್ನಾಟಕದ ತಜ್ಞರ ಕೊಡುಗೆ ಅಪಾರ. ಚುನಾವಣೆ ವೇಳೆ ದುರುದ್ದೇಶದಿಂದ ಕೂಡಿದ ಪ್ರಚಾರಕ್ಕಾಗಿ ಸಾಮಾಜಿಕ ಜಾಲತಾಣವು ದುರುಪಯೋಗ ಆದಲ್ಲಿ, ಚುನಾವಣಾ ಆಯೋಗದ ಗಮನ ಸೆಳೆಯುವುದರ ಜೊತೆಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ಈ ಮಾಧ್ಯಮ ಸಮರ್ಪಕವಾಗಿ ಬಳಕೆಯಾಗುವಂತೆ ನೋಡಿಕೊಳ್ಳಬೇಕಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್‌ ರಾವತ್‌ ಕೋರಿದ್ದಾರೆ.

ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಈಗಾಗಲೇ ಸಾಮಾಜಿಕ ಜಾಲತಾಣವು ಸಾರ್ವಜನಿಕರಲ್ಲಿ ಅಭಿಪ್ರಾಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಅಂತೆಯೇ ಆಯೋಗವೂ ಸಾಮಾಜಿಕ ಜಾಲತಾಣ ಕುರಿತ ನೀತಿ ರೂಪಿಸಿದ್ದು, ಸಾಮಾಜಿಕ ಮಾಧ್ಯಮ ಕೇಂದ್ರ ಸ್ಥಾಪಿಸುವ ಮೂಲಕ ಜನಜಾಗೃತಿ ಮೂಡಿಸಲು ಮುಂದಾಗಿದೆ ಎಂದು ಅವರು ವಿವರಿಸಿದರು.

ADVERTISEMENT

ಆಯೋಗವು ವೈಯಕ್ತಿಕ ಫೇಸ್‌ಬುಕ್‌ ಖಾತೆ ಹೊಂದುವ ಮೂಲಕ ಯುವಜನರನ್ನು ಮತದಾರರ ಪಟ್ಟಿಗೆ ನೋಂದಾಯಿಸುವಂತೆ, ಮತಗಟ್ಟೆಯತ್ತ ಧಾವಿಸುವಂತೆ ಪ್ರೇರೇಪಿಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.