ADVERTISEMENT

ತಪ್ಪು ದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಕಠಿಣ ಕ್ರಮ: ಮೋದಿ

ಏಜೆನ್ಸೀಸ್
Published 26 ಅಕ್ಟೋಬರ್ 2017, 10:13 IST
Last Updated 26 ಅಕ್ಟೋಬರ್ 2017, 10:13 IST
ನರೇಂದ್ರ ಮೋದಿ (ಸಂಗ್ರಹ ಚಿತ್ರ)
ನರೇಂದ್ರ ಮೋದಿ (ಸಂಗ್ರಹ ಚಿತ್ರ)   

ನವದೆಹಲಿ: ಗ್ರಾಹಕರನ್ನು ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನಿಯಂತ್ರಿಸಲು ಮತ್ತು ಕುಂದುಕೊರತೆಗಳನ್ನು ನಿಗದಿತ ಸಮಯದ ಅವಧಿಯಲ್ಲಿ ಸರಿಪಡಿಸಲು ಶೀಘ್ರದಲ್ಲೇ ಹೊಸ ಗ್ರಾಹಕ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಹೊಸ ಜಿಎಸ್‌ಟಿ ನಿಯಮದಿಂದಾಗಿ ಉತ್ಪಾದಕರಲ್ಲಿ ಸ್ಪರ್ಧೆ ಏರ್ಪಟ್ಟಿದ್ದು, ಬೆಲೆ ಇಳಿಕೆಯಾಗಿ ಗ್ರಾಹಕರಿಗೆ ಪ್ರಯೋಜನವಾಗಲಿದೆ ಎಂದು ಅವರು ಹೇಳಿದರು.

‘ಉದ್ಯಮಶೀಲತೆ ಮತ್ತು ದೇಶದ ಅಗತ್ಯತೆಯನ್ನು ಗಮನದಲ್ಲಿಟ್ಟುಕೊಂಡು ಇಂದು ನಾವು ಹೊಸ ಗ್ರಾಹಕ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವ ಪ್ರಕ್ರಿಯೆ ನಡೆಸುತ್ತಿದ್ದೇವೆ. ಪ್ರಸ್ತಾವಿತ ಕಾಯ್ದೆಯು ಗ್ರಾಹಕ ಸಬಲೀಕರಣದ ನಿಟ್ಟಿನಲ್ಲಿ ಮಹತ್ವದ್ದಾಗಲಿದೆ’ ಎಂದು ಮೋದಿ ಹೇಳಿದರು.

ADVERTISEMENT

‘ತಪ್ಪು ದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಕಠಿಣ ಕ್ರಮಗಳನ್ನು ಕಾಯ್ದೆಯಲ್ಲಿ ಪ್ರಸ್ತಾಪಿಸಲಾಗಿದೆ. ಇಂಥ ಜಾಹೀರಾತುಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರಕ್ಕೆ ಅಧಿಕಾರ ನೀಡಲಾಗುವುದು’ ಎಂದು ಅವರು ತಿಳಿಸಿದರು.

ಗ್ರಾಹಕರ ರಕ್ಷಣೆಗೆ ಸಂಬಂಧಿಸಿ 2015ರಲ್ಲಿ ವಿಶ್ವಸಂಸ್ಥೆ ನಿಗದಿಪಡಿಸಿದ್ದ ಮಾರ್ಗಸೂಚಿಗೆ ಅನುಗುಣವಾಗಿ ಸರ್ಕಾರ ಹೊಸ ಕಾಯ್ದೆ ಜಾರಿಗೆ ತರಲಿದೆ. ಅಸ್ತಿತ್ವದಲ್ಲಿರುವ, 1986ರ ಗ್ರಾಹಕ ರಕ್ಷಣಾ ಕಾಯ್ದೆಯನ್ನು ಪರಿಷ್ಕರಿಸಿ ಹೊಸ ಕಾಯ್ದೆ ರೂಪಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.