ADVERTISEMENT

ದಲಿತ ವಿದ್ಯಾರ್ಥಿ ಆತ್ಮಹತ್ಯೆ: ತೀವ್ರಗೊಂಡ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2016, 6:34 IST
Last Updated 19 ಜನವರಿ 2016, 6:34 IST
ದಲಿತ ವಿದ್ಯಾರ್ಥಿ ಆತ್ಮಹತ್ಯೆ: ತೀವ್ರಗೊಂಡ ಪ್ರತಿಭಟನೆ
ದಲಿತ ವಿದ್ಯಾರ್ಥಿ ಆತ್ಮಹತ್ಯೆ: ತೀವ್ರಗೊಂಡ ಪ್ರತಿಭಟನೆ   

ಹೈದರಾಬಾದ್‌: ದಲಿತ ಸಂಶೋಧನಾ ವಿದ್ಯಾರ್ಥಿ ವೇಮುಲ ರೋಹಿತ್‌ ಆತ್ಮಹತ್ಯೆ ಖಂಡಿಸಿ ಹೈದರಾಬಾದ್‌ನ ಕೇಂದ್ರೀಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. 

ಇನ್ನೊಂದೆಡೆ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಅವರ ನಿವಾಸದ ಮುಂದೆಯೂ, ಟಿಎಸ್‌ಆರ್‌ ಸಂಸದೆ ಕೆ. ಕವಿತಾ ಅವರ ತೆಲಂಗಾಣ ಜಾಗೃತಿ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಇಂದು (ಮಂಗಳವಾರ) ಹೈದರಾಬಾದ್‌ಗೆ ಭೇಟಿ ನೀಡಲಿದ್ದು, ರೋಹಿತ್‌ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ. ನಂತರ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಜತೆಗೆ ಮಾತುಕತೆ ನಡೆಸಲಿದ್ದಾರೆ ಎಂದು ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಮಲ್ಲು ಭಟ್ಟಿ ವಿಕ್ರಮಾರ್ಕ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಪರಿಸ್ಥಿತಿ ಶಾಂತವಾಗಿದೆ. ಒಂದಷ್ಟು ವಿದ್ಯಾರ್ಥಿಗಳು ಮಾತ್ರ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಗಚಿಬೌಲಿ ಪೊಲೀಸ್‌ ಇನ್‌ಸ್ಪೆಕ್ಟರ್‌ ಜೆ ರಮೇಶ್‌ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಈಗ ರಾಜಕೀಯ ಬಣ್ಣ ಪಡೆದಿದೆ. ‘ಇದು ಆತ್ಮಹತ್ಯೆಯಲ್ಲ. ಇದೊಂದು ಕೊಲೆ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು  ಸಮಾನತೆಯ ಕೊಲೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯ ಕ್ಷಮೆ ಕೋರಬೇಕು’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಟ್ವೀಟ್‌ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಹೈದರಾಬಾದ್‌ನ ಗಚಿಬೌಲಿ ಪೊಲೀಸರು ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ, ಕುಲಪತಿ ಪ್ರೊ. ಅಪ್ಪಾರಾವ್‌ ಮತ್ತು ಎಬಿವಿಪಿ ಮುಖಂಡ ಸುಶಿಲ್ ಕುಮಾರ್‌ ಮತ್ತು ಬಿಜೆವೈಎಂ ಮುಖಂಡ ವಿಷ್ಣು ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.