ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟಿಯಾಲ ಹೌಸ್ ಕೋರ್ಟ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಐವರು ಆರೋಪಿಗಳಿಗೆ ಡಿಸೆಂಬರ್ 19ರ ಒಳಗಾಗಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಂಗಳವಾರ ಆದೇಶ ನೀಡಿದೆ.
ಖುದ್ದು ಹಾಜರಾಗುವುದಕ್ಕೆ ವಿನಾಯಿತಿ ನೀಡಲು ಹೈಕೋರ್ಟ್ ನಿರಾಕರಿಸಿರುವುದರಿಂದ ಸೋನಿಯಾ ಮತ್ತು ರಾಹುಲ್ ಸುಪ್ರೀಂಕೋರ್ಟ್ ಮೊರೆ ಹೋಗುವ ಸಾಧ್ಯತೆಗಳಿವೆ.
ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನೀಡಿರುವ ಸಮನ್ಸ್ ರದ್ದುಪಡಿಸುವಂತೆ ಕೋರಿ ಇವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಈ ಕುರಿತು ಪತ್ರಕರ್ತರು ಸೋನಿಯಾ ಗಾಂಧಿ ಅವರ ಪ್ರತಿಕ್ರಿಯೆ ಕೇಳಿದಾಗ. ‘ನಾನು ಯಾಕೆ ಇನ್ನೊಬ್ಬರಿಗೆ ಹೆದರಬೇಕು. ಇಂಧಿರಾ ಗಾಂಧಿ ಸೊಸೆ ನಾನು. ನಾನು ಯಾರಿಗೂ ಹೆದರುವುದಿಲ್ಲ’ ಎಂದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸುಪ್ರೀಂ ಮೊರೆ ಹೋದರೂ ಸೋನಿಯಾ ಮತ್ತು ರಾಹುಲ್‌ಗೆ ಅದೃಷ್ಟ ಒಲಿಯುವುದಿಲ್ಲ’ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಕಲಾಪ ಬಲಿ: ಈ ಪ್ರಕರಣಕ್ಕೆ ಸಂಬಂಧಿಸಿಂತೆ ಕೋಲಾಹಲ ಎದ್ದಿದ್ದರಿಂದ ರಾಜ್ಯಸಭೆ ಮತ್ತು ಲೋಕಸಭೆ ಕಲಾಪವನ್ನು ಮಂಗಳವಾರ ಬೆಳಿಗ್ಗೆ 11:30ರ ತನಕ ಮುಂದೂಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.