ADVERTISEMENT

ಬಿಎಸ್‌ವೈ ವಿರುದ್ಧದ ಎಫ್‌ಐಆರ್ ರದ್ದು: ಸುಪ್ರೀಂನಲ್ಲಿ ಮೇಲ್ಮನವಿ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2012, 19:30 IST
Last Updated 21 ಮಾರ್ಚ್ 2012, 19:30 IST

ನವದೆಹಲಿ (ಪಿಟಿಐ): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ರದ್ದು ಮಾಡಿರುವ ಹೈಕೋರ್ಟಿನ ಕ್ರಮವನ್ನು ಮೂಲ ಅರ್ಜಿದಾರ ಸಿರಾಜಿನ್ ಬಾಷಾ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲು ಮಾಡಲು ರಾಜ್ಯಪಾಲರಿಂದ ಅನುಮತಿ ಪಡೆದು ಬಾಷಾ ಲೋಕಾಯುಕ್ತ ನ್ಯಾಯಾಲಯದ ಮೊರೆ ಹೋಗಿದ್ದರು.

ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ನ್ಯಾಯಾಲಯದಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗಳನ್ನು ರಾಜ್ಯ ಹೈಕೋರ್ಟ್ ರದ್ದು ಪಡಿಸುವ ಸಂದರ್ಭದಲ್ಲಿ ಮೂಲ ಅರ್ಜಿದಾರರಾದ ತಮ್ಮನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎಂದು ಬಾಷಾ ಪರ ವಕೀಲ ಪ್ರಶಾಂತ್ ಕುಮಾರ್ ವಿಶೇಷ ಮೇಲ್ಮನವಿಯಲ್ಲಿ ಆಕ್ಷೇಪಿಸಿದ್ದಾರೆ.

ರಾಜ್ಯಪಾಲರು ನೀಡಿರುವ ಅನುಮತಿಯನ್ನು ರದ್ದು ಪಡಿಸುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ ಎಂದೂ ಬಾಷಾ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.