ADVERTISEMENT

ಬೆಂಬಲ ವಾಪಸ್: ಮುಲಾಯಂ ಬೆದರಿಕೆ

ಎಸ್‌ಸಿ, ಎಸ್ಟಿ ಸರ್ಕಾರಿ ನೌಕರರ ಬಡ್ತಿ ಮೀಸಲಾತಿಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2012, 19:54 IST
Last Updated 15 ಡಿಸೆಂಬರ್ 2012, 19:54 IST

ಮೈನಾಪುರಿ (ಉತ್ತರ ಪ್ರದೇಶ) (ಪಿಟಿಐ): ಪರಿಶಿಷ್ಟ ಜಾತಿ, ಪಂಗಡದ ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ಸಮಾಜವಾದಿ ಪಕ್ಷ (ಎಸ್‌ಪಿ), ಈ ಮಸೂದೆ ಅಂಗೀಕೃತವಾದರೆ ಕೇಂದ್ರ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆಯುವ ಕುರಿತು ಆಲೋಚಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದೆ.

`ಈ ಮಸೂದೆಯು ರಾಜ್ಯಸಭೆಯಲ್ಲಿ ಮತದಾನಕ್ಕೆ ಬಂದಿದ್ದೇ ಆದರೆ, ನಮ್ಮ ಪಕ್ಷವು ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆಯುವ ಬಗ್ಗೆ ಚಿಂತಿಸಬೇಕಾಗುತ್ತದೆ' ಎಂದು ಎಸ್‌ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಸುದ್ದಿಗಾರರಿಗೆ ಇಲ್ಲಿ ತಿಳಿಸಿದ್ದಾರೆ. `ಇದು ರಾಷ್ಟ್ರ ವಿರೋಧಿ ಮಸೂದೆ. ಇದು ಸಮಾಜವನ್ನು ಒಡೆಯುತ್ತದೆ. ಈ ಮಸೂದೆಯನ್ನು ನಾವು ಸಂಸತ್ ಒಳಗೆ ಮತ್ತು ಹೊರಗೆ ವಿರೋಧಿಸುತ್ತೇವೆ ಮತ್ತು ಅದನ್ನು ಮುಂದುವರಿಸುತ್ತೇವೆ' ಎಂದು ಅವರು ಹೇಳಿದ್ದಾರೆ.

ತೀವ್ರಗೊಂಡ ಪ್ರತಿಭಟನೆ:  ಇದೇ ವೇಳೆ, ಬಡ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಮೀಸಲಾತಿ ಕಲ್ಪಿಸುವ ಮಸೂದೆಯ ವಿರುದ್ಧ ಉತ್ತರ ಪ್ರದೇಶದ ಲಕ್ಷಾಂತರ ಸರ್ಕಾರಿ ನೌಕರರು ಶನಿವಾರ ರಾಜ್ಯದ ವಿವಿಧ ಕಡೆಗಳಲ್ಲಿ ಬೃಹತ್ ಪ್ರತಿಭಟನಾ ರ‌್ಯಾಲಿ ಹಾಗೂ ಧರಣಿಗಳನ್ನು ನಡೆಸಿದರು.

18 ಲಕ್ಷಕ್ಕೂ ಅಧಿಕ ನೌಕರರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸಲು ಮುಂದಾಗಿರುವುದು ಸಂವಿಧಾನ ಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ವಜನ ಹಿತ ಸಂರಕ್ಷಣಾ ಸಮಿತಿಯು ಈ ಪ್ರತಿಭಟನೆ ನೇತೃತ್ವ ವಹಿಸಿತ್ತು.  ಪ್ರತಿಭಟನೆಯ ಸಂದರ್ಭದಲ್ಲಿ ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.