ADVERTISEMENT

ಭ್ರಷ್ಟರ ವಿರುದ್ಧ ಶಿಸ್ತು ಕ್ರಮ : ಕೇಂದ್ರದಿಂದ 3 ತಿಂಗಳ ಗಡುವು

​ಪ್ರಜಾವಾಣಿ ವಾರ್ತೆ
Published 20 ಜುಲೈ 2012, 19:30 IST
Last Updated 20 ಜುಲೈ 2012, 19:30 IST

ನವದೆಹಲಿ (ಪಿಟಿಐ): ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತೀವ್ರ ಟೀಕೆ ಎದುರಿಸುತ್ತಿರುವ ಕೇಂದ್ರ ಸರ್ಕಾರ, ಮೂರು ತಿಂಗಳ ಒಳಗಾಗಿ ಎಲ್ಲಾ  ಭ್ರಷ್ಟ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಚಿವಾಲಯಗಳು, ಬ್ಯಾಂಕ್‌ಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಆದೇಶಿಸಿದೆ.

ನಿರ್ದಿಷ್ಟ ಅವಧಿಯೊಳಗಾಗಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡುವ ಸಂಬಂಧ ಹೊರಡಿಸಲಾಗಿರುವ ಆದೇಶದ ಪಾಲನೆಯಾಗದೇ ಇರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ, ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿ ಎಲ್ಲಾ ಇಲಾಖೆಗಳಿಗೆ ಪತ್ರ ಬರೆದಿದೆ.

ವಿವಿಧ ಇಲಾಖೆಗಳಲ್ಲಿ  ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡುವ ಸಂಬಂಧ ಇನ್ನೂ ಇತ್ಯರ್ಥವಾಗದೇ ಉಳಿದಿರುವ ಪ್ರಕರಣಗಳ ಕುರಿತಂತೆ ಪರಿಶೀಲನೆ ನಡೆಸಲು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (ಡಿಒಪಿಟಿ) ಕಾರ್ಯದರ್ಶಿಗಳು ನಡೆಸಿದ ಸಭೆಯ ಬಳಿಕ ಕೇಂದ್ರ ಸರ್ಕಾರ ಈ ಆದೇಶ ನೀಡಿದೆ.

ಈ ವಿಚಾರದಲ್ಲಿ  ಭ್ರಷ್ಟ ವ್ಯಕ್ತಿಗಳ ಪ್ರತಿನಿಧಿಗಳು ಮಧ್ಯಪ್ರವೇಶಿಸಲು ಅವಕಾಶ ನೀಡಬಾರದು. ಒಂದು ವೇಳೆ ಅವಕಾಶ ನೀಡಿದರೆ ಪ್ರಕರಣ ಇತ್ಯರ್ಥ ಪಡಿಸುವುದಕ್ಕೆ ವಿಳಂಬವಾಗುತ್ತದೆ ಎಂದು ಪತ್ರ ಹೇಳಿದೆ.

ಬ್ಯಾಂಕ್‌ಗಳಲ್ಲಿ ಮತ್ತು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಗಳಲ್ಲಿ  ಶಿಸ್ತು ಕ್ರಮ ಕೈಗೊಳ್ಳಬೇಕಾದ ಸಂಸ್ಥೆಗಳು ಮೊದಲಿಗೆ  ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲು ನಿರಾಕರಿಸಿ ನಂತರ ಈ ಬಗ್ಗೆ ಕೇಂದ್ರ ಜಾಗೃತ ಆಯೋಗದ ಸಲಹೆ ಕೇಳಿರುವುದು ಕಂಡು ಬಂದಿದೆ. ಇದು ಈ ಗಾಗಲೇ ಜಾರಿಗೆ ತಂದಿರುವ ನಿಯಮಗಳ ಸ್ಪಷ್ಟ ಉಲ್ಲಂಘನೆ ಎಂದು ಪತ್ರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.