ನವದೆಹಲಿ, (ಪಿಟಿಐ): ವೋಟಿಗಾಗಿ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಶುಕ್ರವಾರ ತಿಳಿಸುವಂತೆ ನ್ಯಾಯಾಲಯವು ತಿಹಾರ್ ಜೈಲಿನ ಅಧಿಕಾರಿಗಳಿಗೆ ಸೂಚಿಸಿದೆ.
ಅಮರ್ ಸಿಂಗ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿರುವುದರಿಂದ ಅವರನ್ನು ತುರ್ತಾಗಿ ಬಿಡುಗಡೆ ಮಾಡುವುದು ಅಗತ್ಯವಾಗಿದ್ದು, ಮಧ್ಯಂತರ ಜಾಮೀನು ನೀಡಬೇಕು ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಈ ತಿಂಗಳ 19ರಂದು ನಡೆಯಲಿರುವ ಜಾಮೀನು ಅರ್ಜಿಯ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಧೀಶರ ಬಯಸಿದ್ದು, ಸಿಂಗ್ ಅವರ ಈಗಿನ ಸ್ಥಿತಿಯಲ್ಲಿ ಜೈಲಿನಲ್ಲಿಯೇ ಬಿಟ್ಟರೆ 19ರಂದು ನ್ಯಾಯಾಲಯಕ್ಕೆ ಹಾಜರಾಗುವ ಸ್ಥಿತಿಯಲ್ಲಿ ಅವರು ಇರುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ.
ಆದ್ದರಿಂದ ಮಧ್ಯಂತರ ಜಾಮೀನು ಆದೇಶ ಹೊರಡಿಸಬೇಕು ಎಂದು ವಕೀಲ ಹರಿಹರನ್ ಅವರು ತಿಳಿಸಿದರು.
ಈ ಹಿನ್ನೆಲೆಯಲ್ಲಿ ನ್ಯಾಯಾಧೀಶೆ ಸಂಗೀತಾ ಧಿಂಗ್ರಾ ಸೆಹಗಲ್ ಅವರು ಸಿಂಗ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವರದಿ ಸಲ್ಲಿಸುವಂತೆ ಜೈಲು ಅಧಿಕಾರಿಗಳಿಗೆ ಆದೇಶಿಸಿದರು.
ಮೂತ್ರಪಿಂಡದ ಕಸಿಯ ನಂತರ ಸಿಂಗ್ ಅವರು ಮೂತ್ರನಾಳದ ತೊಂದರೆಯಿಂದ ಬಳಲುತ್ತಿರುವುದರಿಂದ ಜೈಲಿನಲ್ಲಿಯ ಶೌಚಾಲಯ ಬಳಸಿದರೆ ತೊಂದರೆ ಜಾಸ್ತಿಯಾಗುತ್ತದೆ ಹಾಗೂ ಜೀವಕ್ಕೇ ಅಪಾಯವಾಗುವ ಸಾಧ್ಯತೆಗಳು ಇವೆ. ಆದ್ದರಿಂದ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಹರಿಹರನ್ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.