ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಭರತ್‌ಪುರದಲ್ಲಿ ಟಿಎಂಸಿ ಕಾರ್ಯಕರ್ತನೊಬ್ಬನನ್ನು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಸಸ್ತಿ ಘೋಷ್ ಕೊಲೆಯಾದ ಕಾರ್ಯಕರ್ತ. ಬುಧವಾರ ರಾತ್ರಿ ಮನೆಗೆ ಹಿಂತಿರುಗುತ್ತಿದ್ದಾಗ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಸಸ್ತಿ ಘೋಷ್ ಮೇಲೆ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಬೀದಿ ಬದಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಘೋಷ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಸಸ್ತಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ತಿಳಿಸಿದ್ದಾರೆ.
ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಟಿಎಂಸಿಗೆ ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಕೊಲೆ ನಡೆದಿದೆ ಎಂದು ಮೃತನ ಕುಟುಂಬ ಆರೋಪಿಸಿದೆ.
ಮತ್ತೊಂದು ಘಟನೆಯಲ್ಲಿ, ದಕ್ಷಿಣ 24 ಪರಗಣ ಜಿಲ್ಲೆಯ ಕಾಕ್‌ದ್ವೀಪ್ ಪ್ರದೇಶದ ಮಧುಸೂದನ್‌ಪುರದಲ್ಲಿ ಬುಧವಾರ ಪಂಚಾಯತ್ ಸದಸ್ಯರೊಬ್ಬರ ಸೋದರಳಿಯನನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.