ADVERTISEMENT

ಯುಪಿಎ ಮಿತ್ರಪಕ್ಷಗಳಿಗೆ ಇಂದು ಪ್ರಧಾನಿ ಸಿಂಗ್ ಔತಣ ಕೂಟ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2012, 19:30 IST
Last Updated 12 ಮಾರ್ಚ್ 2012, 19:30 IST

ನವದೆಹಲಿ (ಪಿಟಿಐ): ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಬಂಧದಲ್ಲಿ ಬಿರುಕು ಮೂಡಿರುವುದರ ನಡುವೆಯೇ ಪ್ರಧಾನಿ ಮನಮೋಹನ್ ಸಿಂಗ್ ಮಂಗಳವಾರ ಯುಪಿಎ ಮಿತ್ರ ಪಕ್ಷಗಳ ಪ್ರಮುಖರಿಗೆ ಔತಣ ಕೂಟ ಏರ್ಪಡಿಸಿದ್ದಾರೆ.

ಈ ಮುನ್ನ ಸೋಮವಾರವೇ ಔತಣಕೂಟ ನೀಡಲು ತೀರ್ಮಾನಿಸಲಾಗಿತ್ತು. ಆದರೆ ನಂತರ, ಮಂಗಳವಾರಕ್ಕೆ ಮುಂದೂಡಲಾಯಿತು. ಪ್ರಧಾನಿಯವರು ತಮ್ಮ ನಿವಾಸದಲ್ಲಿ ನೀಡುವ ಔತಣಕೂಟಕ್ಕೆ ಯುಪಿಎ ಮಿತ್ರಪಕ್ಷಗಳ ಪ್ರಮುಖರನ್ನು ಈಗಾಗಲೇ ಆಹ್ವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಿಲ್ಲರೆ ಮಾರಾಟ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ, ಎನ್‌ಸಿಟಿಸಿ ಸ್ಥಾಪನೆ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಕಾಂಗ್ರೆಸ್ಸೇತರ ಮುಖ್ಯಮಂತ್ರಿಗಳೊಡನೆ ಸಹಮತ ಹೊಂದಿರುವ ಹಿನ್ನೆಲೆಯಲ್ಲಿ ಈ ಔತಣಕೂಟ ಗಮನ ಸೆಳೆದಿದೆ.

ADVERTISEMENT

ಪಂಜಾಬ್‌ನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಶಿರೋಮಣಿ ಅಕಾಲಿದಳದ ಪ್ರಕಾಶ್ ಸಿಂಗ್ ಬಾದಲ್ ಅವರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಮತಾ ಬ್ಯಾನರ್ಜಿ ಅವರಿಗೆ ನೀಡಿದ್ದ ಆಹ್ವಾನಕ್ಕೆ, ಮಮತಾ ಮೊದಲು ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಇದು ಸರ್ಕಾರದ ಮೇಲೆ ಒತ್ತಡ ಹೇರುವ ತಂತ್ರ ಎನ್ನಲಾಗಿದೆ. ಆದರೆ ಇದೀಗ ಮಮತಾ ಸಮಾರಂಭಕ್ಕೆ ಸ್ವತಃ ತೆರಳದೆ, ತಮ್ಮ ಪರವಾಗಿ ಪ್ರತಿನಿಧಿಗಳನ್ನು ಕಳುಹಿಸುವ ನಿರ್ಧಾರಕ್ಕೆ ಬಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.